ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿ ಸರ್ಕಾರದ ಮುಜುಗರಕ್ಕೆ ಕಾರಣವಾಗಿದ್ದ ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಪ್ರಕರಣ ಜೂನ್ 25ರಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕ ಸಮಿತಿ ಮುಂದೆ ಚರ್ಚೆಗೆ ಬರುವ ಸಾಧ್ಯತೆ ಇದೆ.
ಬಿಜೆಪಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅಧ್ಯಕ್ಷತೆಯ ಸಾರ್ವಜನಿಕ ಲೆಕ್ಕ ಸಮಿತಿಯ ಸಭೆ ಜೂನ್ 25ರಂದು ನಡೆಯಲಿದೆ. ವಿಧಾನಮಂಡಲದ ಎರಡೂ ಸದನಗಳ ಸದಸ್ಯರು ಈ ಸಮಿತಿಯ ಸದಸ್ಯರಾಗಿದ್ದಾರೆ.
ಪ್ರಮುಖವಾಗಿ ಜಿಂದಾಲ್‌ಗೆ ಜಮೀನು ಪರಭಾರೆ ಮಾಡುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ಕಾಂಗ್ರೆಸ್ ಶಾಸಕ ಎಚ್.ಕೆ.ಪಾಟೀಲ್ ಕೂಡ ಈ ಸಮಿತಿಯ ಸದಸ್ಯರಿದ್ದಾರೆ. ಅಲ್ಲದೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಮೇಲ್ಮನೆ ಸದಸ್ಯ ಬಸವರಾಜ್ ಹೊರಟ್ಟಿ, ಬಿಜೆಪಿಯ ಗೋವಿಂದ ಕಾರಜೋಳ ಈ ಸಮಿತಿಯ ಸದಸ್ಯರಾಗಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ಈ ವಿಷಯ ಕುರಿತಂತೆ ಸಂಪುಟ ಉಪ ಸಮಿತಿ ರಚನೆ ಮಾಡಿದೆ. ಆದರೆ, ಉಪ ಸಮಿತಿಗೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ. ಸರ್ಕಾರದ ನಿರ್ಧಾರದ ಹೊರತಾಗಿಯೂ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಈ ವಿಷಯಕ್ಕೆ ಸಂಬಂಧಿಸಿದಂತೆ ಏನಾದರೂ ಶಿಫಾರಸು ಮಾಡುವ ಅಧಿಕಾರ ಹೊಂದಿರುವುದರಿಂದ ಜೂನ್ 25ರಂದು ನಡೆಯುವ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಮಹತ್ವ ಪಡೆದುಕೊಂಡಿದೆ.
ಜಿಂದಾಲ್‌ಗೆ ಜಮೀನು ಪರಭಾರೆ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಹಲವು ಶಿಫಾರಸ್ಸುಗಳನ್ನೊಳಗೊಂಡ ವಿಶೇಷ ವರದಿಯನ್ನು ಸದನಕ್ಕೆ ಸಲ್ಲಿಸಲು ಅವಕಾಶ ಇರುವುದರಿಂದ ಜೂನ್ 25ರಂದು ನಡೆಯುವ ಸಮಿತಿ ಸಭೆಗೆ ಮಹತ್ವ ಬಂದಿದೆ.