ಮೈಸೂರು: ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕೆಲವೊಂದು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಸರ್ಕಾರದ ಕ್ರಮಕ್ಕೆ ಸಾರ್ವಜನಿಕರು ಸಹಕರಿಸುವಂತೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವರು, ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಚುರುಕುಗೊಳಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಜ.8 ಮತ್ತು 9ರಂದು ವಾರಾಂತ್ಯ ಕರ್ಫ್ಯೂ ಇರಲಿದೆ. ವಾರಾಂತ್ಯ ಕರ್ಫ್ಯೂನಲ್ಲಿ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ವಾರಾಂತ್ಯದ ಕರ್ಪ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಯಿಂದ ಚೆಕ್ ಪೊಸ್ಟ್ ಗಳನ್ನು ಹಾಕಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಸಂಚರಿಸಬಾರದು. ಪೊಲೀಸ್, ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕಿಸುವ ಪ್ರಮಾಣ ಶೇ.100ರಷ್ಟು ತಲುಪಬೇಕು. ರೋಗ ಲಕ್ಷಣಗಳು ಕಂಡು ಬಂದಾಕ್ಷಣ ಹೋಂ ಐಸೋಲೇಶನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಬಹುದು ಅಥವಾ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಬಹುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆಗಳು, ವೆಂಟಿಲೇಟರ್ ಲಭ್ಯತೆ ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಆತಂಕಗೊಳ್ಳುವುದು ಬೇಡ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ಹರಡದಂತೆ ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿರುವುದರಿಂದ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.