Advertisement

7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ: ಇಂದು ನಿರ್ಧಾರ

10:53 PM Dec 10, 2019 | Lakshmi GovindaRaj |

ಬೆಂಗಳೂರು: ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆಯಿಲ್ಲ. ಆದರೂ, ಈ ಬಾರಿಯಿಂದಲೇ ಪಬ್ಲಿಕ್‌ ಪರೀಕ್ಷೆ ನಡೆಸಿದರೆ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದೇ ದೊಡ್ಡ ಸವಾಲಾಗಲಿದೆ.ಪಬ್ಲಿಕ್‌ ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನೇ ಇನ್ನು ಆರಂಭಿಸದಿರುವುದು ಒಂದೆಡೆಯಾದರೆ, ಪಬ್ಲಿಕ್‌ ಪರೀಕ್ಷೆ ನಡೆಸುವುದು ಮಕ್ಕಳ ಹಕ್ಕಿನ ಉಲ್ಲಂಘನೆ.

Advertisement

ಇದಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿರುವ ನೋಟಿಸ್‌ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆಯಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸರ್ಕಾರದ ಮಟ್ಟದಲ್ಲಿ ಇನ್ನೂ ಸ್ಪಷ್ಟತೆ ಇಲ್ಲದ ಕಾರಣ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಡಿ.11ರಂದು ನಗರದ ನೃಪತುಂಗ ರಸ್ತೆಯ ಶಿಕ್ಷಕರ ಸದನದಲ್ಲಿ ಸಭೆ ಆಯೋಜಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದು ಶಿಕ್ಷಣ ಇಲಾಖೆ ಉನ್ನತ ಅಧಿಕಾರಿಗಳು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಇಲಾಖೆ ಉನ್ನತ ಮೂಲಗಳು ಖಚಿತಪಡಿಸಿವೆ.

ಪಬ್ಲಿಕ್‌ ಪರೀಕ್ಷೆ ನಡೆಸುವ ಕುರಿತು ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸ್ಪಷ್ಟನೆ ಕೋರಿ ನವೆಂಬರ್‌ನಲ್ಲಿ ಇಲಾಖೆಗೆ ನೋಟಿಸ್‌ ನೀಡಿತ್ತು. ಇಲಾಖೆಯಿಂದ ಯಾವುದೇ ಸ್ಪಷ್ಟನೆ ಆಯೋಗಕ್ಕೆ ಬಾರದಿದ್ದರಿಂದ ಮತ್ತೂಮ್ಮೆ ನೋಟಿಸ್‌ ಜಾರಿಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿ.11ರಂದು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next