ಉಡುಪಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಜಿಲ್ಲೆಯಲ್ಲಿ 1,589 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಜೂ. 11ರಿಂದ 20ರವರೆಗೆ ನಡೆಯುವ ಪರೀಕ್ಷೆಯು ಸುಸೂತ್ರವಾಗಿ ನಡೆಯುವಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಅವರು ಶುಕ್ರವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆಯು ಕಾರ್ಕಳದ ಭುವನೇಂದ್ರ ಪದವಿ ಪೂರ್ವ ಕಾಲೇಜು, ಉಡುಪಿ ಸರಕಾರಿ ಪ.ಪೂ. ಕಾಲೇಜು, ಎಂಜಿಎಂ ಪ.ಪೂ. ಕಾಲೇಜು, ಕುಂದಾಪುರದ ಭಂಡಾರ್‌ಕಾರ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಲಾ ವಿಭಾಗದಲ್ಲಿ 170 ಬಾಲಕರು ಮತ್ತು 125 ಬಾಲಕಿಯರು, ವಿಜ್ಞಾನ ವಿಭಾಗದಲ್ಲಿ 268 ಬಾಲಕರು 198 ಬಾಲಕಿಯರು, ವಾಣಿಜ್ಯ ವಿಭಾಗದಲ್ಲಿ 586 ಬಾಲಕರು ಮತ್ತು 242 ಬಾಲಕಿಯರು ಸೇರಿದಂತೆ ಒಟ್ಟು 1,589 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬೇರೆ ಜಿಲ್ಲೆಯ ಇಬ್ಬರು ಹಿರಿಯ ಉಪನ್ಯಾಸಕರನ್ನು ಜಾಗೃತ ದಳದ ಸದಸ್ಯರನ್ನಾಗಿ ನೇಮಿಸಿದೆ.
ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಬಿಗಿ ಭದ್ರತೆಯಲ್ಲಿ ಇಡಲು ಎಲ್ಲ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಖಜಾನೆಯಲ್ಲಿ ಸಿಸಿ ಕೆಮರಾ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗಲು 3 ಸದಸ್ಯರ ಅಧಿಕಾರಿಗಳ ತಂಡ ರಚಿಸಿದ್ದು, ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆ ಹ್ಯಾಂಡಲ್ ಮಾಡುವ ಎಲ್ಲರಿಗೂ ಗುರುತಿನ ಚೀಟಿ ವಿತರಣೆ ಹಾಗೂ ಎಲ್ಲರ ಬಯೋ ಮೆಟ್ರಿಕ್ ನೋಂದಣಿ ಮಾಡಲಾಗಿದೆ. ಖಜಾನೆಯಲ್ಲಿ ಬಯೋ ಮೆಟ್ರಿಕ್ ಯಂತ್ರ ಅಳವಡಿಸಲಾಗಿದೆ ಹಾಗೂ ಬಾರ್ ಕೋಡಿಂಗ್ ರೀಡರ್ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆ ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದು ಡಿಸಿ ತಿಳಿಸಿದರು.
ಪರೀಕ್ಷೆಯು ಯಾವುದೇ ಗೊಂದಲ, ಸಮಸ್ಯೆಗೆ ಒಳಗಾಗದಂತೆ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಡಿಸಿ ಸೂಚಿಸಿದರು. ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಲು ಕಾರಣವಾದ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಉಪನ್ಯಾಸಕರನ್ನು ಜಿಲ್ಲಾಧಿಕಾರಿ ಅಭಿನಂದಿಸಿದರು.
ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಪಿಯು ಇಲಾಖೆಯ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಶಿ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಿಡಿಪಿಐ ಶೇಷಶಯನ ಕಾರಿಂಜ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಉಪಸ್ಥಿತರಿದ್ದರು.