ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಹಾಗೂ ನವಜ್ಯೋತ್ ಸಿಂಗ್ ಸಿಧು ನಡುವಿನ ಮುಸುಕಿನ ಗುದ್ದಾಟದ ಪರಿಣಾಮ ಪಂಜಾಬ್ ಕಾಂಗ್ರೆಸ್ ಪಾಳಯದಲ್ಲಿ ಬಿಕ್ಕಟ್ಟು ಎದುರಾಗಿದ್ದು, ಏತನ್ಮಧ್ಯೆ ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಮುಖ್ಯ ಕೋಚ್ ಕೆಲಸದಿಂದ ತೃಪ್ತಿಯಾಗಿದೆ, ಆದರೆ ಅಲ್ಪ ಬೇಸರವೂ ಇದೆ: ರವಿ ಶಾಸ್ತ್ರಿ
ಶನಿವಾರ (ಸೆಪ್ಟೆಂಬರ್ 18) ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ಸಭೆಗೂ ಮುನ್ನ ಕ್ಯಾ.ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಈ ಮೂಲಕ ಪಂಜಾಬ್ ನಲ್ಲಿ ನೂತನ ನಾಯಕನ ಆಯ್ಕೆಗೆ ಕಾಂಗ್ರೆಸ್ ಮುಂದಾಗಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಸಾಲ ಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ
ಪಕ್ಷದಲ್ಲಿ ತನಗೆ ಅಪಮಾನವಾಗುತ್ತಿದ್ದು, ಇದೇ ರೀತಿಯಾದರೆ ತಾನು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾ.ಅಮರಿಂದರ್ ಸಿಂಗ್ ಅವರು ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಜತೆ ದೂರವಾಣಿಯಲ್ಲಿ ಮಾತನಾಡುತ್ತ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ.
ಪಂಜಾಬ್ ಕಾಂಗ್ರೆಸ್ ನಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಸಲು ಎಐಸಿಸಿ ನಿರ್ಧರಿಸಿದೆ. ಅಲ್ಲದೇ ಶಾಸಕಾಂಗ ಸಭೆಯಲ್ಲಿ ನೂತನ ನಾಯಕನ ಆಯ್ಕೆ ಮಾಡುವ ಬಗ್ಗೆ ಪಂಜಾಬ್ ನ ಹಲವು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
ಸೋನಿಯಾ ಗಾಂಧಿ ಮತ್ತು ಅಮರಿಂದರ್ ಸಿಂಗ್ ನಡುವೆ ನಡೆದ ದೂರವಾಣಿ ಸಂಭಾಷಣೆಯಲ್ಲಿ, ಹೈಕಮಾಂಡ್ ನಿರ್ದೇಶನದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೋನಿಯಾ ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕ್ಯಾ.ಅಮರಿಂದರ್ ಸಿಂಗ್ ಇಂದು ಸಂಜೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.