ಚಂಡೀಗಢ್: ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಕ್ಷಿಪ್ರವಾಗಿ ಹರಡುವುದನ್ನು ತಡೆಗಟ್ಟಲು ರಾಜ್ಯಾದ್ಯಂತ ಜನವರಿ 15ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಪಂಜಾಬ್ ಸರ್ಕಾರ ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಲಾಕ್ ಡೌನ್- ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಜೊತೆ ಚರ್ಚಿಸಿ ನಿರ್ಧಾರ: ಸಿಎಂ ಬೊಮ್ಮಾಯಿ
ಪಂಜಾಬ್ ಸರ್ಕಾರ ಹೊರಡಿಸಿರುವ ಪ್ರಕಟಣೆ ಪ್ರಕಾರ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯ್ದ ಸಡಿಲಿಕೆಯೊಂದಿಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಾಗಿ ಹೇಳಿದೆ. ಬಾರ್, ಸಿನಿಮಾ ಹಾಲ್, ಮಾಲ್ಸ್, ರೆಸ್ಟೋರೆಂಟ್, ಸ್ಪಾಗಳಲ್ಲಿ ಶೇ.50ರಷ್ಟು ಸೀಟುಗಳ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿ ನೀಡಿರುವುದಾಗಿ ಹೇಳಿದೆ.
ಜಿಮ್ ತೆರೆಯಲು ಅವಕಾಶವಿಲ್ಲ. ಕೋವಿಡ್ ಎರಡು ಡೋಸ್ ಪಡೆದುಕೊಂಡವರು ಮಾತ್ರ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ಬರಲು ಅನುಮತಿ ನೀಡಲಾಗಿದೆ ಎಂದು ಪಂಜಾಬ್ ಸರ್ಕಾರ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ರಾತ್ರಿ 10ರಿಂದ ಬೆಳಗ್ಗಿನ ಜಾವ 5ಗಂಟೆವರೆಗೆ ತುರ್ತು ಸೇವೆ ಹೊರತುಪಡಿಸಿ ಬೇರೆ ಯಾವುದೇ ವ್ಯಾಪಾರ, ವಹಿವಾಟುಗಳಿಗೆ ಅವಕಾಶವಿಲ್ಲ. ಶಾಲಾ, ಕಾಲೇಜು, ವಿಶ್ವವಿದ್ಯಾಲಯ ಮತ್ತು ಕೋಚಿಂಗ್ ಸೆಂಟರ್ ಗಳು ಬಂದ್ ಮಾಡಲು ಆದೇಶ ನೀಡಲಾಗಿದೆ.
ಕಳೆದ ಕೆಲವು ದಿನಗಳಲ್ಲಿ ಪಂಜಾಬ್ ನಲ್ಲಿ ಭಾರೀ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 6,05,922ಕ್ಕೆ ಏರಿಕೆಯಾಗಿದ್ದು, ಈವರೆಗೆ 16,651 ಮಂದಿ ಸಾವನ್ನಪ್ಪಿದ್ದಾರೆ.