Advertisement

ಕಳಪೆ ರಸಗೊಬ್ಬರ ನೀಡಿದರೆ ಕೇಸ್‌ ಹಾಕಿ

03:31 PM May 15, 2022 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ಕಳಪೆ ರಸಗೊಬ್ಬರ ಗೊಬ್ಬರ ಮಾರಾಟ ಮಾಡಿದರೆ ಅಂತಹವರನ್ನು ಪತ್ತೆಹಚ್ಚಿ ಪೊಲೀಸ್‌ ಕೇಸ್‌ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ರಾಜ್ಯ ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚನೆ ನೀಡಿದರು.

Advertisement

ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸಕ್ತ ವರ್ಷ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ಒದಗಿಸಬೇಕು ಎಂದು ಸೂಚಿಸಿದರು. ಈ ನಿಟ್ಟಿನಲ್ಲಿ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳು ರಸಗೊಬ್ಬರ ಮಳಿಗೆಗಳನ್ನು ತಪಾಸಣೆ ಮಾಡಬೇಕು. ತಪ್ಪಿತಸ್ಥ ಮಾರಾಟಗಾರರು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದ್ದರಿಂದ ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.

ಮುಂಗಾರು ಹಂಗಾಮಿಗೆ ಒಟ್ಟು 1,17,360 ಮೆಟ್ರಿಕ್‌ ಟನ್‌ನಷ್ಟು ರಸಗೊಬ್ಬರದ ಅವಶ್ಯಕತೆಯಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 25,701 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಇದೆ. 3,90,210 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಪ್ರಮುಖ ಬೆಳೆಗಳಾದ ಭತ್ತ-87,000, ತೊಗರಿ-96,000, ಹೆಸರು-26010, ಹತ್ತಿ-1,66,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಈ ಬೆಳೆಗಳಿಗೆ ಅಗತ್ಯವಿರುವಷ್ಟು ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಕುರಿತು ಪರಾಮರ್ಶಿಸಿದ ಸಚಿವರು, ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆಯೋ ಶೀಘ್ರ ಪರಿಹರಿಸಬೇಕೆಂದು ತಹಶೀಲ್ದಾರ್‌ರು ಹಾಗೂ ತಾಲೂಕು ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು. ಗ್ರಾಮಗಳಲ್ಲಿ ಪೈಪ್‌ ಒಡೆದು ನೀರು ಸೋರಿಕೆಯಾಗದಂತೆ ಎಚ್ಚರಿಕೆವಹಿಸಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ದೂರಗಳನ್ನು ಶೀಘ್ರ ಇತ್ಯರ್ಥ ಮಾಡುವಂತೆ ಸೂಚಿಸಿದ ಸಚಿವರು, ಸೂಚನೆಗಳನ್ನು ಪಾಲನೆ ಮಾಡದ ಅಧಿಕಾರಿಗಳಿಗೆ ನೋಟಿಸ್‌ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

ಜಾನುವಾರುಗಳಿಗೆ ಬಿಸಿಲಿನ ತಾಪ ತಟ್ಟದಂತೆ ನೋಡಿಕೊಳ್ಳಲು ಜಿಲ್ಲಾ ಉಸ್ತುವರಿ ಸಚಿವರು ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಹೇಳಿದರು. ಯಾದಗಿರಿ ಕ್ಷೇತ್ರದ ಶಾಸಕ ವೆಂಕಟಗೌಡರೆಡ್ಡಿ ಮುದ್ನಾಳ, ಜಿಪಂ ಸಿಇಒ ಅಮರೇಶರ ನಾಯ್ಕ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿಲ್ಲೆಯ ತಹಶೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲೆಯ ನಗರಸಭೆ ಹಾಗೂ ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next