ಪುತ್ತೂರು: ಪುತ್ತೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ಪೋಟೋ ಬಳಸಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 9 ಮಂದಿ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಇದಕ್ಕೆ ಸಂಬಂಧಿಸಿದ್ದು ಎನ್ನಲಾದ ಫೋಟೊ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಜೆಪಿ ಹಾಗೂ ನಗರಸಭೆ ನೀಡಿದ ದೂರಿನ್ವಯ ನರಿಮೊಗರು ಗ್ರಾಮದ ನಿವಾಸಿಗಳಾದ ವಿಶ್ವನಾಥ್, ಮಾಧವ, ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಅವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದು ಈ ವೇಳೆ ಥಳಿಸಲಾಗಿದೆ ಎನ್ನುವ ಆರೋಪ ವ್ಯಕ್ತವಾಗಿದೆ.
ಥಳಿತದಿಂದ ಗಾಯಗೊಂಡ ಯುವಕರ ಚಿತ್ರಗಳು ಹಾಗೂ ತಡರಾತ್ರಿ ಪುತ್ತೂರು ಡಿವೈಎಸ್ ಪಿ ಕಚೇರಿಯಿಂದ ನಡೆದಾಡಲೂ ಕಷ್ಟ ಪಡುವ ರೀತಿಯಲ್ಲಿ ಹೆಜ್ಜೆ ಹಾಕುತ್ತಿರುವ ಯುವಕರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೊದಲ್ಲಿ ಬೆನ್ನು ಸೊಂಟದ ಹಿಂಭಾಗದಲ್ಲಿ ಥಳಿಸಿರುವುದು ಕಾಣುತ್ತಿದೆ.
Related Articles
ಬಂಧಿತರು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾಗಿದ್ದು ಅದರಲ್ಲಿ ಕೆಲವರು ಈ ಬಾರಿ ಪಕ್ಷೇತರ ಅಭ್ಯರ್ಥಿಯ ಪರ ಪ್ರಚಾರಕ್ಕೆ ಹೋಗಿದ್ದರು. ಉಳಿದವರು ಬಿಜೆಪಿಯ ಪರವೇ ಪ್ರಚಾರ ನಡೆಸಿದ್ದರು ಎನ್ನಲಾಗಿದೆ. ಜಿಲ್ಲೆ, ರಾಜ್ಯದ ಕೆಲ ಪ್ರಭಾವಿಗಳ ಒತ್ತಡದಿಂದ ಬಂಧನದ ನೆಪದಲ್ಲಿ ದೌರ್ಜನ್ಯ ನಡೆಸಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.