Advertisement

Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ 

12:55 AM Nov 30, 2024 | Team Udayavani |

ಪುತ್ತೂರು: ಎಂಟು ವರ್ಷಗಳ ಹಿಂದೆ ಪುತ್ತೂರಿನ ಮೊಟೆತ್ತಡ್ಕದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದ ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

Advertisement

ಮೊಟೆತ್ತಡ್ಕ ಮಸೀದಿ ಬಳಿಯ ನಿವಾಸಿ ಅಬ್ದುಲ್‌ ರಹಿಮಾನ್‌ ಜೈಲು ಶಿಕ್ಷೆಗೆ ಒಳಗಾದ ಆರೋಪಿ. 2016ರ ನ. 18ರಂದು ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕದಲ್ಲಿ ಅಬ್ದುಲ್‌ ರಹಿಮಾನ್‌ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕಿಯು ನೀಡಿದ ಹೇಳಿಕೆಯಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆಯನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಸರಿತಾ ಡಿ. ಅವರು ಕೈಗೆತ್ತಿಕೊಂಡು ಒಟ್ಟು 17 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿದ್ದು, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.

ವಿವಿಧ ಕಲಂಗಳ ಅಡಿಯಲ್ಲಿ ಒಟ್ಟು 5 ವರ್ಷ ಜೈಲು ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತದಲ್ಲಿ 30 ಸಾವಿರ ರೂ. ಅನ್ನು ಬಾಲಕಿಗೆ ನೀಡುವಂತೆ ಹಾಗೂ ಹೆಚ್ಚುವರಿಯಾಗಿ ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ 50 ಸಾವಿರ ರೂ. ಪರಿಹಾರ ಬಾಲಕಿಗೆ ನೀಡುವಂತೆ ಆದೇಶಿಸಿದೆ. ಸರಕಾರದ ಪರ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯ ಅವರು ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next