ಬೆಂಗಳೂರು: ಶಾಸಕ ಸುಧಾಕರ್ ಅವರ ಜೊತೆ ಚರ್ಚಿಸಿ ರಾಜೀನಾಮೆ ವಾಪಸ್ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇನೆ..ಇದು ಅತೃಪ್ತ ಶಾಸಕ, ಸಚಿವ ಎಂಟಿಬಿ ನಾಗರಾಜ್ ಹೇಳಿಕೆ.
ಶನಿವಾರ ಮುಂಜಾನೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್, ಡಿಸಿಎಂ ಪರಮೇಶ್ವರ್ ದಿಢೀರ್ ಎಂಬಂತೆ ಎಂಟಿಬಿ ನಾಗರಾಜ್ ಮನೆಗೆ ಭೇಟಿ ನೀಡಿ ಸುಮಾರು ಆರು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.
ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಎಂಟಿಬಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಮುಖಂಡರು ನನ್ನ ಮನವಲಿಕೆಗೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ನಾನು ಸುಧಾಕರ್ ಅವರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಯಾವುದೋ ಒಂದು ಗಳಿಕೆಯಲ್ಲಿ ಏನೋ ನಡೆದು ಹೋಯಿತು. ಅವೆಲ್ಲವನ್ನೂ ಮರೆತು ಇದೀಗ ನಾವೆಲ್ಲ ಒಗ್ಗಟ್ಟಿನಿಂದ ಇರಲು ತೀರ್ಮಾನಿಸಿದ್ದೇವೆ. ಹೀಗಾಗಿ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಎಂಟಿಬಿ ಕಾಲಾವಕಾಶ ಕೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಏತನ್ಮಧ್ಯೆ ಆರು ಗಂಟೆಗಳ ಕಾಲ ಮಾತುಕತೆ ನಡೆಸಿದರೂ ಎಂಟಿಬಿ ನಾಗರಾಜ್ ಮನವೊಲಿಕೆಗೆ ಒಪ್ಪಿಲ್ಲವಾಗಿತ್ತು ಎಂದು ವರದಿಯಾಗಿತ್ತು.