Advertisement

ಶೀಘ್ರ ಮನೆ ಹಸ್ತಾಂತರ: ಕೊಡಗು ಡಿಸಿ ನಿರ್ದೇಶನ

12:30 AM Feb 22, 2019 | Team Udayavani |

ಮಡಿಕೇರಿ: ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಸಂಬಂಧಪಟ್ಟ ಅರ್ಹ ಫ‌ಲಾನುಭವಿಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
  
ಈಗಾಗಲೇ ಬಸವನಹಳ್ಳಿಯಲ್ಲಿ 138 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 34 ಮನೆಗಳ ಕಾಮಗಾರಿ ಬಾಕಿ ಇದೆ. ಹಾಗೆಯೇ ಬ್ಯಾಡಗೊಟ್ಟದಲ್ಲಿ 132 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 21 ಮನೆಗಳ ಕಾಮಗಾರಿ ಬಾಕಿ ಇದೆ ಎಂದು ಐಟಿಡಿಪಿ ಅಧಿಕಾರಿ ಶಿವಕುಮಾರ್‌ ಮಾಹಿತಿ ನೀಡಿದರು. 

ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿ ತಾತ್ಕಾಲಿಕ ಶೆಡ್‌ಗಳನ್ನು ತೆರವುಗೊಳಿಸಿದ ನಂತರ ಪ್ರಾರಂಭಿಸಲಾಗುವುದು ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಅವರು ತಿಳಿಸಿದರು.  

ಅಂತಿಮ ಹಂತದಲ್ಲಿರುವಂತಹ ಕಾಮಗಾರಿಗಳನ್ನು ತುರ್ತಾಗಿ ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಮತ್ತು ಕೆಆರ್‌ಐಡಿಸಿಎಲ್‌ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲೀಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.

Advertisement

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆದು ಕೊಳ್ಳುತ್ತಿರುವ ಅರ್ಹ ಫ‌ಲಾನುಭವಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್‌ ಖಾತೆ ಹೊಂದುವಂತೆ ಹಾಗೂ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಪತ್ರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ತಿಳಿಸಿದರು.  

Advertisement

Udayavani is now on Telegram. Click here to join our channel and stay updated with the latest news.

Next