Advertisement

ರಾಜ್ಯದ ಪ್ರತಿ ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕೆ ಅಗತ್ಯ ಭೂಮಿ : ಸಚಿವ ಆರ್. ಅಶೋಕ್

07:43 PM Sep 15, 2021 | Team Udayavani |

ವಿಧಾನಪರಿಷತ್ತು: ರಾಜ್ಯದ ಪ್ರತಿಯೊಂದು ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕೆ ಅಗತ್ಯ ಭೂಮಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನಗಳ ಕುರಿತು ಬಿಜೆಪಿಯ ಮಹಾಂತೇಶ ಕವಟಗಿಮಠ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಸ್ಮಶಾನ ಸೌಲಭ್ಯ ಒದಗಿಸಲು ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿಯವರಿಂದ ಮಾರುಕಟ್ಟೆ ದರಕ್ಕಿಂತ ಮೂರು ಪಟ್ಟು ಹೆಚ್ಚಿನ ದರದಲ್ಲಿ ಜಮೀನು ಖರೀದಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ಹೆಚ್ಚಿನ ದರಕ್ಕೆ ಬೇಡಿಕೆ ಬಂದಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ ಜಮೀನು ಲಭ್ಯವಿರುವ ಕಡೆ ಪ್ರತಿ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಗರಿಷ್ಠ 2 ಎಕರೆ ಜಮೀನು ಕಾಯ್ದಿರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಖಾಸಗಿಯವರಿಂದ ಭೂಮಿ ಖರೀದಿಗೆ ಕಳೆದ ಮೂರು ವರ್ಷಗಳಲ್ಲಿ 26 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಅಶೋಕ್‌ ಮಾಹಿತಿ ನೀಡಿದರು.

ಇದನ್ನೂ ಓದಿ :ಕೇವಲ ಓಟಿಗಾಗಿ ಮಾತ್ರ ಹಿಂದುತ್ವ, ಹಿಂದೂ ಧರ್ಮದ ಬಗ್ಗೆ ಬಿಜೆಪಿಗೆ ಗೌರವವೇ ಇಲ್ಲ : ಸಿದ್ದು

Advertisement

ಅಕ್ರಮ-ಸಕ್ರಮ: ಸುಪ್ರೀಂಗೆ ಅಫಿಡವಿಟ್‌:
ಅಕ್ರಮ-ಸಕ್ರಮ ಯೋಜನೆಗೆ ಸುಪ್ರೀಂಕೋರ್ಟ್‌ ತಡೆ ನೀಡಿರುವುದರಿಂದ ಸರ್ಕಾರದ ಕೈ ಕಟ್ಟಿ ಹಾಕಿದಂತಾಗಿದೆ. ಇದರಿಂದಾಗಿ ಕಂದಾಯ ನಿವೇಶನಗಳನ್ನು ಸಕ್ರಮಗೊಳಿಸಿ ನೋಂದಣಿ ಮಾಡಲು ಸಾಧ್ಯವಾಗುತ್ತಿಲ್ಲ. ಕಂದಾಯ ನಿವೇಶಗಳನ್ನು ನೋಂದಣಿಗೆ ಅವಕಾಶ ನೀಡಿದರೆ ರಾಜ್ಯದಲ್ಲಿ 10ರಿಂದ 15 ಲಕ್ಷ ಮಂದಿಗೆ ಅನುಕೂಲವಾಗಲಿದೆ. ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಆದಾಯ ಬರಲಿದೆ. ಅಕ್ರಮ-ಸಕ್ರಮ ಯೋಜನೆಗೆ ನೀಡಿರುವ ತಡೆ ತೆರುವುಗೊಳಿಸುವ ಸಂಬಂಧ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಲಾಗುವುದು ಎಂದು ಜೆಡಿಎಸ್‌ನ ಕಾಂತರಾಜ್‌ ಅವರ ಪ್ರಶ್ನೆಗೆ ಕಂದಾಯ ಸಚಿವ ಆರ್‌. ಅಶೋಕ್‌ ಉತ್ತರಿಸಿದರು.

ಕಂದಾಯ ಗ್ರಾಮಗಳ ಘೋಷಣೆಗೆ ಕ್ರಮ:
ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ರಾಜ್ಯದ 1,400 ಲಂಬಾಣಿ ತಾಂಡ, ಹಟ್ಟಿ-ಹಾಡಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ 803 ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಅಧಿಸೂಚನೆ ಹೊರಡಿಸಲಾಗಿದೆ. ಕಂದಾಯ ಗ್ರಾಮಗಳು ಆಗದೆ ಸೌಲಭ್ಯಗಳು ಸಿಗುವುದಿಲ್ಲ. ಆದ್ದರಿಂದ ಸರ್ಕಾರ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುತ್ತಿದೆ. 2 ತಿಂಗಳ ಹಿಂದೆಯೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಸದಸ್ಯ ಪ್ರಕಾಶ ರಾಠೊಡ್‌ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ 5 ಸಾವಿರ ಲಂಬಾಣಿ ತಾಂಡಗಳಿವೆ. ಅನೇಕ ತಾಂಡಗಳು ಬಿಟ್ಟು ಹೋಗಿವೆ. ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದರು ಮನವಿ ಮಾಡಿದರು. ಅದೇ ರೀತಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣಿಗಾರನಕಟ್ಟೆ, ಹೊಸದೊಡ್ಡಿ, ಬಸವನಗೌಡನದೊಡ್ಡಿ, ದಾಲನಕಟ್ಟೆ ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವಂತೆ ರಾಠೊಡ್‌ ಇದೇ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ : ಸಿಎಂ ಕೇಜ್ರಿವಾಲ್ ಭೇಟಿ ಬೆನ್ನಲ್ಲೆ ನಟ ಸೋನು ಸೂದ್‍ಗೆ ’ಐಟಿ’ ಶಾಕ್

ಒಂದೇ ಜೇಷ್ಠತಾ ಪಟ್ಟಿಗೆ ಕ್ರಮ:
ಕಂದಾಯ ಇಲಾಖೆಯ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ದ್ವೀತಿಯ ದರ್ಜೆ ಸಹಾಯಕರ ಒಂದೇ ಜೇಷ್ಠತಾ ಪಟ್ಟಿ ತಯಾರಿಸಿ ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ನೀಡಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಸಚಿವ ಸಂಪುಟದ ಅನುಮೋದನೆ ಪಡೆದು 2021 ಜು.29ರಂದು ಕರಡು ಅಧಿಸೂಚನೆ ಪ್ರಕಟಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಕಾಂಗ್ರೆಸ್‌ ಸದಸ್ಯ ನಸೀರ್‌ ಅಹ್ಮದ್‌ ಪ್ರಶ್ನೆಗೆ ಉತ್ತರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next