ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ಆರ್ . ಲತಾ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಅಪರ ಜಿಲ್ಲಾಧಿಕಾರಿ ಆರತಿ ಆನಂದ್ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ಜಿಲ್ಲಾಧಿಕಾರಿ ಕಛೇರಿಯಲ್ಲಿ ದಾಖಲಾತಿಗಳಿಗೆ ಸಹಿ ಮಾಡಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಆರ್ ಲತಾ ಅವರನ್ನು ಆಗಸ್ಟ್ 27ರಂದು ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಿತ್ತು.
ಮಂಡ್ಯ ಹಾಗೂ ಪಾಂಡವಪುರದಲ್ಲಿ ಉಪವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದ ಇವರು, ತದ ನಂತರ ರಾಮನಗರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.