Advertisement

ಮೋದಿ ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ

03:06 PM May 09, 2022 | Team Udayavani |

ಹಾವೇರಿ: ಬಿಜೆಪಿ ಪಕ್ಷ ಹೋರಾಟದ ಮೂಲಕ ಅಧಿಕಾರ ಹಿಡಿದಿದ್ದು, ಪ್ರಧಾನಿ ಮೋದಿ ಅವರಿಂದ ದೇಶದ ಆಡಳಿತ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಕಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕೆಂದು ಶಾಸಕ ನೆಹರು ಓಲೇಕಾರ ಹೇಳಿದರು.

Advertisement

ನಗರದ ಶಿವಶಕ್ತಿ ಪ್ಯಾಲೇಸ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಆಯೋಜಿಸಿದ್ದ ಜಿಲ್ಲಾ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಎಲ್ಲಾ ಕಾರ್ಯಕರ್ತರು ಸಂಘಟಿತರಾಗಿ ವ್ಯಾಪಕ ಪ್ರಚಾರ ಕೈಗೊಂಡು ರಾಜ್ಯದಲ್ಲಿ ಮತ್ತೂಮ್ಮೆ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರುವಲ್ಲಿ ಶ್ರಮಿಸಬೇಕೆಂದರು.

ನೇರ, ನಿಷ್ಠುರತೆಗೆ ಹೆಸರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ 95ನೇ ಸ್ಥಾನದಲ್ಲಿದ್ದ ಭಾರತ ದೇಶವನ್ನು 2ನೇ ಸ್ಥಾನಕ್ಕೆ ತೆಗೆದುಕೊಂಡು ಹೋಗಿ ವಿಶ್ವ ಗುರುವನ್ನಾಗಿ ಮಾಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿವೆ. ಬಡವರು, ಮಹಿಳೆಯರು, ರೈತರು, ಕೃಷಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ವಿಮೆ, ಫಸಲ್‌ ಬಿಮಾ, ಆಯುಷ್ಮಾನ್‌, ಕಿಸಾನ್‌ ಸಮ್ಮಾನ್‌, ಜಲಜೀವನ್‌ ಮಿಷನ್‌ ಹೀಗೆ ಹತ್ತು ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದು ಜನಮಾನಸದಲ್ಲಿ ಅಚ್ಚಳಿಯದೇ ಉಳಿಯುವಂತಹ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಅಷ್ಟೇ ಅಲ್ಲದೇ, ನೂರಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅಯೋಧ್ಯೆ ರಾಮ ಮಂದಿರ ವಿವಾದವನ್ನು ಬಗೆಹರಿಸಿ ರಾಮಮಂದಿರ ಕಟ್ಟಡ ನಿರ್ಮಿಸಲು ಮುಂದಾಗಿದ್ದಾರೆ. ತ್ರಿವಳಿ ತಲಾಖ್‌ನ್ನು ರದ್ದು ಮಾಡಿ ಮಹಿಳೆಯರಿಗೆ ಆಗುತ್ತಿದ್ದ ಅನ್ಯಾಯ ತಪ್ಪಿಸಿದ್ದಾರೆ. ಕಾಶ್ಮೀರದಲ್ಲಿ ಆರ್ಟಿಕಲ್‌ 370 ವಿಧಿಯನ್ನು ರದ್ದು ಮಾಡಿ ದೇಶದಲ್ಲಿ ಸಮನ್ವಯತೆ ಕಾಯ್ದುಕೊಂಡಿದ್ದಾರೆ. ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ದೇಶದ ಪೂರ್ಣ ಸ್ವಾತಂತ್ರ್ಯ ನೀಡುವ ಮೂಲಕ ಅಭಯ ನೀಡಿದ್ದಾರೆ. ಗಂಗಾ ಹಾಗೂ ಯಮುನಾ ನದಿಗಳನ್ನು ಶುದ್ಧೀಕರಣಗೊಳಿಸಿ ಪವಿತ್ರ ತೀರ್ಥ ಸಿಗುವಂತೆ ಮಾಡಿ ಅಭೂತಪೂರ್ವ ಯಶಸ್ಸನ್ನು ಕಂಡಿದ್ದಾರೆ. ಅಲ್ಲದೇ, ನದಿಗಳ ಜೋಡಣೆ ಕಾರ್ಯವೂ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಭಾರತ ದೇಶ ವಿಶ್ವಕ್ಕೆ ದೊಡ್ಡಣ್ಣನಾಗಿ ಹೊರಹೊಮ್ಮಲಿದೆ ಎಂದರು.

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮಾಡಬೇಕು. ಪ್ರತಿಯೊಬ್ಬ ಕಾರ್ಯಕರ್ತರು ಸಂಘಟಿತರಾಗಿ ಪಕ್ಷ ನೀಡುವ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದರು.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ಧರಾಜ ಕಲಕೋಟಿ ಮಾತನಾಡಿ, ಕಾರ್ಯಕರ್ತರು ಸಮಂನೆಯಲ್ಲಿ ತೊಡಗುವ ಮೂಲಕ ಪಕ್ಷ ನೀಡುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಮುಂಬರುವ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆ ಎದುರಾಗಲಿದ್ದು, ಎಲ್ಲದಕ್ಕೂ ಸಿದ್ಧರಾಗಬೇಕೆಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶಿವರಾಜ ಸಜ್ಜನರ, ವಿಪ ಸದಸ್ಯ ಆರ್‌.ಶಂಕರ, ಪಾಲಾಕ್ಷಗೌಡ ಪಾಟೀಲ, ಡಿ.ಎಂ.ಸಾಲಿ, ಮಂಜುನಾಥ ಓಲೇಕಾರ, ಕಲ್ಲೇಶ ಎನ್‌.ಎಲ್‌., ಬಸವರಾಜ ಕೇಲಗಾರ, ಭಾರತಿ ಜಂಬಗಿ, ರಾಜಕುಮಾರ ಸೇರಿದಂತೆ ಬಿಜೆಪಿ ಜಿಲ್ಲಾ, ತಾಲೂಕು ಹಾಗೂ ಗ್ರಾಮೀಣ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next