ಕಲಬುರಗಿ: ಅಖೀಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ನಗರದಲ್ಲಿ ನಡೆಯುವ ಕಾಂಗ್ರೆಸ್ ರ್ಯಾಲಿಯಲ್ಲಿ ಪಾಲ್ಗೊಂಡು ಚುನಾವಣಾ ಪ್ರಚಾರ ಮಾಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಇಲ್ಲಿನ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12:30ಕ್ಕೆ ಬಂದಿಳಿಯುವ ಅವರು, ಮಧ್ಯಾಹ್ನ 1ಕ್ಕೆ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2:30ರ ನಂತರ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು. ಲೋಕಸಭೆಗೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ರಾಹುಲ್ ಪ್ರಥಮ ಚುನಾವಣಾ ರ್ಯಾಲಿ ಇದಾಗಿದೆ.
ಕಳೆದ ಹತ್ತು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಹಳೆ ಮೊಳಗಿಸಿದ ನಂತರ ಈಗ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿರುವುದು ಕುತೂಹಲ ಮೂಡಿಸಿದೆ.
ಪ್ರಧಾನಿ ಮೋದಿ ರ್ಯಾಲಿ ನಡೆದ ಸ್ಥಳವಾಗಿರುವ ನೂತನ ಮಹಾ ವಿದ್ಯಾಲಯ ಆವರಣದಲ್ಲೇ ರಾಹುಲ್ ರ್ಯಾಲಿಯೂ ನಡೆಯಲಿದ್ದು, ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ತಿಳಿಸಿದ್ದಾರೆ.
ಈ ರ್ಯಾಲಿಯಲ್ಲಿ ಕಲಬುರಗಿ ಕ್ಷೇತ್ರದ ಸಂಸದರಾಗಿರುವ ಡಾ|ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಹಾಗೂ ಇತರರು ಪಾಲ್ಗೊಳ್ಳುವರು.ಇದೇ ವೇಳೆ ಬಿಜೆಪಿಗೆ ಗುಡ್ ಬೈ ಹೇಳಿರುವ ಮಾಜಿ ಸಚಿವ ಕೆ.ಬಿ.ಶಾಣಪ್ಪ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಾಬುರಾವ ಚವ್ಹಾಣ, ಬಿಜೆಪಿಯ “ಬೇಟಿ ಬಚಾವೋ ಬೇಟಿ ಪಡಾವೋ’ ರಾಜ್ಯ ಸಂಚಾಲಕ ಸುಭಾಷ ರಾಠೊಡ, ಪಾಲಿಕೆ ಸದಸ್ಯರು ಸೇರಿದಂತೆ ಇತರರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.