ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯದಲ್ಲಿ ಶನಿವಾರ ಭಾಗವಹಿಸಲಿರುವ ಮೂರೂ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಕೋಲಾರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವತಿಯಿಂದ ಆಯೋಜಿಸಿರುವ ಸಮಾವೇಶ, ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಆವರಣ ಹಾಗೂ ಕೆ.ಆರ್.ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಕಾಂಗ್ರೆಸ್-ಜೆಡಿಎಸ್ ಜಂಟಿ ಸಮಾವೇಶದಲ್ಲಿ ರಾಹುಲ್ ಭಾಗವಹಿಸಲಿದ್ದಾರೆ. ಈ ಮೂರೂ ಕಾರ್ಯಕ್ರಮಗಳಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಈ ಮಧ್ಯೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ ಕ್ಷೇತ್ರಗಳಿಂದಲೂ ಪ್ರಚಾರಕ್ಕೆ ಬರುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಬೇಡಿಕೆ ಇದ್ದು, ಭಾನುವಾರದಿಂದ ಮಂಗಳವಾರದವರೆಗೆ ಆ ಕ್ಷೇತ್ರಗಳಲ್ಲಿ ಅವರು ಪ್ರಚಾರ ಕೈಗೊಳ್ಳಲಿದ್ದಾರೆ.
ಮಂಗಳವಾರ ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ, ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದ ಕೆಲವು ಕ್ಷೇತ್ರಗಳಲ್ಲೂ ಸಿಎಂ ಪ್ರಚಾರಕ್ಕೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ಮಧ್ಯೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ವಿಶೇಷವಾಗಿ ಮೈಸೂರು, ಚಾಮರಾಜನಗರ, ಹಾಸನ, ತುಮಕೂರು ಕ್ಷೇತ್ರಗಳ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಕ್ಷೇತ್ರಗಳ ಬಗ್ಗೆ ಹೆಚ್ಚು ಗಮನ ಹರಿಸಲು ದೇವೇಗೌಡರು ಅವರಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.