ನವದೆಹಲಿ: ಬೆಲೆ ಏರಿಕೆ, ಜಿಎಸ್ ಟಿ ಹೆಚ್ಚಳ ಮತ್ತು ನಿರುದ್ಯೋಗದ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ (ಆಗಸ್ಟ್ 05) ಪಕ್ಷದ ಪ್ರಧಾನ ಕಚೇರಿ ಬಳಿ ಭಾರೀ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಸಂಪುಟ ವಿಸ್ತರಣೆಗಾಗಿ ದಿಲ್ಲಿಗೆ ಬರುವುದು ಬೇಡ..: ರಾಜ್ಯ ನಾಯಕರಿಗೆ ಶಾ ಖಡಕ್ ಸಂದೇಶ
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ರಾಹುಲ್ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಪಕ್ಷದ ಮುಖಂಡರು ಸಂಸದರು ತೋಳಿಗೆ ಕಪ್ಪುಪಟ್ಟಿ ಧರಿಸಿ ಪಕ್ಷದ ಕಚೇರಿಗೆ ಆಗಮಿಸಿದ್ದರು.
ಸಂಸತ್ ನಿಂದ ರಾಷ್ಟ್ರಪತಿ ಭವನದವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಸಂಸದರು, ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು. ಆದರೆ ದೆಹಲಿ ಪೊಲೀಸರು ರಾಷ್ಟ್ರರಾಜಧಾನಿಯಲ್ಲಿ ನಿಷೇಧಾಜ್ಞೆ ಆದೇಶ ಜಾರಿಯಲ್ಲಿರುವುದರಿಂದ ಪ್ರತಿಭಟನೆ ನಡೆಸಲು ಅನುಮತಿ ನೀಡಲಿಲ್ಲ ಎಂದು ವರದಿ ಹೇಳಿದೆ.
ಆದರೂ ಕಾಂಗ್ರೆಸ್ ನ ಎಲ್ಲಾ ಸಂಸದರು ರಾಷ್ಟ್ರಪತಿ ಭವನದತ್ತ ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ವಿಜಯ್ ಚೌಕ್ ನಿಂದ ಮುಂದೆ ಹೋಗಲು ಅನುಮತಿ ನಿರಾಕರಿಸಿದ್ದು, ಹಲವು ಸಂಸದರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಕೋಲಾಹಲ ಎಬ್ಬಿಸಿದ ಪರಿಣಾಮ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 12ಗಂಟೆವರೆಗೆ ಮುಂದೂಡಲಾಗಿತ್ತು.