ಹೊಸದಿಲ್ಲಿ: 2018ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದ ಹೇಳಿಕೆಗೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರಾಗಿದೆ. ಉತ್ತರ ಪ್ರದೇಶದ ಸುಲ್ತಾನಪುರದ ವಿಶೇಷ ನ್ಯಾಯಾಲಯವು ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.
25,000 ರೂ.ಗಳ ಶ್ಯೂರಿಟಿ ಮತ್ತು ಅಷ್ಟೇ ಮೊತ್ತದ ವೈಯಕ್ತಿಕ ಬಾಂಡ್ ಮೇಲೆ ರಾಹುಲ್ ಗಾಂಧಿಗೆ ಜಾಮೀನು ನೀಡಲಾಗಿದೆ. ತಾನು ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿದರು.
2018 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು. ಅಲ್ಲಿ ಅವರು ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು 2018ರ ಆಗಸ್ಟ್ 4ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದರು. ರಾಹುಲ್ ಗಾಂಧಿಯವರು ಅಮಿತ್ ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು.
ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಅವರು ಶಾ ರನ್ನು ಕೊಲೆ ಪ್ರಕರಣದ ಆರೋಪಿ ಎಂದು ಸಂಬೋಧಿಸಿದ್ದರು. ರಾಹುಲ್ ಗಾಂಧಿ ಹೇಳಿಕೆಯ ಸಮಯದಲ್ಲಿ ಅಮಿತ್ ಶಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.
ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್‌ಕೌಂಟರ್ ಪ್ರಕರಣದಿಂದ 2014 ರಲ್ಲಿ ಶಾ ಅವರನ್ನು ಖುಲಾಸೆಗೊಳಿಸಿತ್ತು.