ಅಹಮದಾಬಾದ್: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುಜರಾತ್‌ನ ಪೋರ್‌ಬಂದರ್‌ನಿಂದ ಅಸ್ಸಾಂವರೆಗೆ ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಾಗಿದ್ದಾರೆ.
ಈ ತಿಂಗಳು ರಾಯಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಮಹಾತ್ಮಾ ಗಾಂಧೀಜಿ ಅವರ ಹುಟ್ಟೂರಾದ ಪೋರ್‌ಬಂದರ್‌ನಿಂದ ಯಾತ್ರೆ ಆರಂಭಿಸಲು ಚಿಂತಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
“ಎರಡನೇ ಹಂತದ ಯಾತ್ರೆಯ ದಿನಾಂಕಗಳು ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಭಾರತ್ ಜೋಡೋ ಯಾತ್ರೆಗೆ ನಾಗರಿಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಈ ವೇಳೆ ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲಾಯಿತು,’ ಎಂದು ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ತಿಳಿಸಿದರು.
ಈ ನಡುವೆ, ದೇಶದ ಹಲವು ಭಾಗಗಳಲ್ಲಿ “ಹಾಥ್ ಸೆ ಹಾಥ್ ಜೋಡೋ’ ಯಾತ್ರೆಗೆ ಉತ್ತಮ ರೀತಿಯಲ್ಲಿ ಬೆಂಬಲ ವ್ಯಕ್ತವಾಗುತ್ತದೆ ಎಂದರು.