ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ರಾಜ್ಯದ ಪ್ರಸಕ್ತ ವಿದ್ಯಮಾನ ಸೇರಿದಂತೆ ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ರಾಹುಲ್‌ಗಾಂಧಿ ಅವರು ಗುರುವಾರ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಚರ್ಚಿಸಲಿದ್ದಾರೆ.
ಗುರುವಾರ ಸಂಜೆ 4.30 ಕ್ಕೆ ದೆಹಲಿಯಲ್ಲಿ ಸಭೆ ನಡೆಯಲಿದ್ದು ರಾಹುಲ್‌ಗಾಂಧಿ ಜತೆ ನೇರಾ-ನೇರಾ ಮಾತುಕತೆಗೆ ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕೀಯದಿಂದ ಉಂಟಾಗುತ್ತಿರುವ ಗೊಂದಲ, ಪ್ರಮುಖ ತೀರ್ಮಾನ ಕೈಗೊಳ್ಳಲು ಸಮನ್ವಯ ಸಮಿತಿ ರಚನೆ ಬಗ್ಗೆ ಹಿರಿಯ ನಾಯಕರು ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಗೊಂದಲ ಹಾಗೂ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಪಕ್ಷಕ್ಕೆ ಸಮಸ್ಯೆಯಾಗಬಾರದು.ಎಲ್ಲರೂ ಒಟ್ಟಾಗಿ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಾಕೀತು ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಹಾಗೂ ಜೆಡಿಎಸ್‌ನಿಂದ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದು ಅವರಿಗೆ ಟಿಕೆಟ್ ನೀಡುವ ವಿಚಾರ ಹಾಗೂ ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ಬರುವವರಿಂದ ಆಯಾ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಉಂಟಾಗಲಿರುವ ಪರಿಣಾಮಗಳ ಬಗ್ಗೆಯೂ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.ಇದೇ ವೇಳೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿಯೂ ಅಂತಿಮಗೊಳಿಸುವ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸಹ ಇರಲಿದ್ದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಧ್ರುವನಾರಾಯಣ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಕೇಂದ್ರದ ಮಾಜಿ ಸಚಿವರಾದ ಕೆ.ಎಚ್.ಮುನಿಯಪ್ಪ, ರೆಹಮಾನ್ ಖಾನ್, ವೀರಪ್ಪ ಮೊಯ್ಲಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್ ಸೇರಿ ಹದಿನೈದು ಮಂದಿಗೆ ಬುಲಾವ್ ಬಂದಿದೆ.