ರಾಣಿಬೆನ್ನೂರು: ಲೋಕಸಭಾ ಚುನಾವಣೆ ಪ್ರಚಾರಾರ್ಥ ಮಾ.9ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಕರ್ನಾ ಟಕಕ್ಕೆ ಆಗಮಿಸಲಿದ್ದಾರೆ. ಹಾವೇರಿ ಲೋಕ ಸಭಾ ಮತ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಇಲ್ಲಿಂದಲೇ ಲೋಕಸಭೆಗೆ ಪಕ್ಷದ ಪ್ರಚಾರ ಆರಂಭವಾಗಲಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂದಿನ ಬಹಿರಂಗ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕರ್ನಾಟಕದಿಂದ ಆರಂಭಿಸುತ್ತಿರುವುದು ಸಂತಸ ತಂದಿದೆ ಎಂದರು.
ಮಂಡ್ಯದಲ್ಲಿ ಕಾಂಗ್ರೆಸ್‌ನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಡುವ ಸಾಧ್ಯತೆಯಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮೂಲಕ ಲೋಕಸಭೆ ಚುನಾವಣೆ ಎದುರಿಸುತ್ತಿರುವುದರಿಂದ ಹಾಲಿ ಸಂಸದರಿರುವ ಕ್ಷೇತ್ರವನ್ನು ಆಯಾ ಪಕÒಕ್ಕೆ ನೀಡಬೇಕಾಗುತ್ತದೆ. ಈ ಕುರಿತು ಎರಡೂ ಪಕÒಗಳ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎಂದು ಶಾಸಕ ಬಿ.ಸಿ.ಪಾಟೀಲ ಒತ್ತಾಯಿಸಿ ದ್ದಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ಹಾಗೆ ಕೇಳುವುದರಲ್ಲಿ ತಪ್ಪೇನಿದೆ?. ಸಲೀಂ ಅಹ್ಮದ್ ಸಹ ಮುಸ್ಲಿಮರಿಗೆ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಯಾರೇ ಕೇಳಿದರೂ ತಪ್ಪಿಲ್ಲ. ಆದರೆ, ಎಐಸಿಸಿ ಮತ್ತು ಕೆಪಿಸಿಸಿ ಅಧ್ಯಕ್ಷರು, ನಾಯಕರು ಪರಿಶೀಲಿಸಿ ಗೆಲ್ಲುವ ಸೂಕ್ತ ಅಭ್ಯರ್ಥಿಗೆ ಟಿಕೇಟ್ ನೀಡಲಿದ್ದಾರೆ. ಪಕ್ಷದ ಯಾವುದೇ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೂ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದರು.