ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ, ಕಾರ್ಯಾ ಧ್ಯಕ್ಷರಾದ ದಿನೇಶ್ ಗುಂಡೂರಾವ್ ಮತ್ತು ಎಸ್. ಆರ್.ಪಾಟೀಲ್ ಹಾಗೂ ನಾಲ್ವರು ಎಐಸಿಸಿ ಕಾರ್ಯದರ್ಶಿಗಳ ಜತೆ ಸಭೆ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದ ನಾಯಕರು ಗುರುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಪ್ರಮುಖವಾಗಿ ಬೂತ್ ಮಟ್ಟದ ಸಮಿತಿಗಳ ರಚನೆ ಕುರಿತ ಬೆಳವಣಿಗೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಹುಲ್ ಸೂಚಿಸಿದಂತೆ ಸೆ. 15ರೊಳಗೆ ಎಲ್ಲ ಸಮಿತಿಗಳ ರಚನೆಯಾಗಬೇಕಿತ್ತು. ಆದರೆ, ಅಕ್ಟೋಬರ್ ಆರಂಭವಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಈ ಕುರಿತು ಮಾಹಿತಿ ಪಡೆಯಲಿದ್ದಾರೆಂದು ತಿಳಿದು ಬಂದಿದೆ.ಅಕ್ಟೋಬರ್ ತಿಂಗಳಾಂತ್ಯಕ್ಕೆ ಬೆಂಗಳೂರಿನಲ್ಲಿ ಬೂತ್ ಮಟ್ಟದ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಪದಗ್ರಹಣಕ್ಕೆ ಮನವಿ?: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಶೀಘ್ರವೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇದರಿಂದ ಅವರ ಅಧಿಕಾರ ಪದಗ್ರಹಣವನ್ನು ಕರ್ನಾಟಕದಲ್ಲಿಯೇ ನಡೆಸುವ ನಿಟ್ಟಿನಲ್ಲಿ ಎಐಸಿಸಿ ಕಾರ್ಯಕಾರಿಣಿಯನ್ನು ರಾಜ್ಯದಲ್ಲಿಯೇ ನಡೆಸುವಂತೆ ರಾಜ್ಯ ನಾಯಕರು ಕೋರುವ ಸಾಧ್ಯತೆ ಇದೆ ಎನ್ನಲಾಗಿದೆ.