Advertisement

ನಶಿಸಿದ ಹೈ-ಕ; ಉದಯಿಸಿದ ಕಲ್ಯಾಣ ಕರ್ನಾಟಕ

03:36 PM Sep 18, 2019 | Team Udayavani |

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಮಂಗಳವಾರ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರೆ, ಎಲ್ಲ ಶಾಲಾ ಕಾಲೇಜು, ಸಂಘ ಸಂಸ್ಥೆಗಳಲ್ಲೂ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು.

Advertisement

ನಗರದ ಪಟೇಲ ವೃತ್ತದಲ್ಲಿರುವ ಸರ್ದಾರ್‌ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಡಿಎಆರ್‌ ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಈ ಭಾಗದ ಅಭ್ಯುದಯ, ಪ್ರಾದೇಶಿಕ ಅಸಮತೋಲನ ನಿವಾರಣೆಯೇ ಸರ್ಕಾರದ ಮೊದಲ ಗುರಿಯಾಗಿದೆ. ಈ ಭಾಗದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಹೈದರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ. ಅದರಂತೆ ಹೈ-ಕ ವಿಮೋಚನಾ ದಿನದ ಬದಲಿಗೆ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ವಿವರಿಸಿದರು.

ಈ ಭಾಗದ ಜಿಲ್ಲೆಗಳು ಸಾಕಷ್ಟು ಹಿಂದುಳಿದಿದ್ದು, ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಹೆಚ್ಚಿನ ಬಲ ತುಂಬುವ ಮೂಲಕ ಈ ಭಾಗದ ಸರ್ವಾಂಗೀಣ ಪ್ರಗತಿಗೆ ಸರ್ಕಾರ ಬದ್ಧವಾಗಿರಲಿದೆ ಎಂದು ಭರವಸೆ ನೀಡಿದರು.

ಜಿಲ್ಲೆಯ ಐದು ತಾಲೂಕಗಳು ಪ್ರವಾಹ ಪೀಡಿತವೆಂದು ಸರ್ಕಾರ ಘೋಷಿಸಿದೆ. ಈ ಬಾರಿ ಕೃಷ್ಣಾ ನದಿಗೆ ಗರಿಷ್ಠ 6.30 ಲಕ್ಷ ಕ್ಯೂಸೆಕ್‌ ನೀರು ಹರಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 242.62 ಕೋಟಿ ರೂ. ಅಂದಾಜು ನೆರೆ ಹಾನಿ ಲೆಕ್ಕಿಸಲಾಗಿದೆ. ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಮಾರ್ಗಸೂಚಿಯನ್ವಯ ಒಟ್ಟು 39 ಕೋಟಿ ರೂ. ಬೇಡಿಕೆ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಪ್ರಸ್ತುತ 12.87 ಕೋಟಿ ರೂ. ಹಣ ಲಭ್ಯವಿದ್ದು, ಬೆಳೆ ಪರಿಹಾರ ಹಾಗೂ ಮನೆಗಳ ನಿರ್ಮಾಣಕ್ಕೆ ಹಂತ ಹಂತವಾಗಿ ಹಣ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

Advertisement

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 2019-20ನೇ ಸಾಲಿಗೆ ಮೈಕ್ರೋ ಯೋಜನೆಯಡಿ 161 ಕೋಟಿ ಹಾಗೂ ಮ್ಯಾಕ್ರೋ ಯೋಜನೆಯಡಿ 70 ಕೋಟಿ ಸೇರಿದಂತೆ ಒಟ್ಟಾರೆ 231 ಕೋಟಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದುವರೆಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಜಿಲ್ಲೆಗೆ 1,014 ಕೋಟಿ ಮಂಜೂರಾಗಿದೆ. ಅದರಲ್ಲಿ 2,857 ಕಾಮಗಾರಿ ಕೈಗೊಂಡಿದ್ದು, 1,583 ಪೂರ್ಣಗೊಂಡಿರುತ್ತವೆ. ಅವುಗಳಿಗಾಗಿ 478 ಕೋಟಿ ರೂ. ಅನುದಾನ ಭರಿಸಲಾಗಿದ್ದು, 852 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದರು.

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಡಿಎಆರ್‌ ವಿಭಾಗದ ಅಧಿಕಾರಿ ಕೇದಾರನಾಥ ನೇತೃತ್ವದಲ್ಲಿ ಪೊಲೀಸ್‌, ಡಿಎಆರ್‌, ವಿವಿಧ ಶಾಲೆಗಳ ಮಕ್ಕಳು ಪರೇಡ್‌ ನಡೆಸಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಗೌರವ ವಂದನೆ ಸಲ್ಲಿಸಿದರು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ಡಾ| ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜಾ ಅಮರೇಶ್ವರ ನಾಯಕ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಂಎಲ್ಸಿ ಬಸವರಾಜ ಪಾಟೀಲ ಇಟಗಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷಿ ್ಮೕಕಾಂತ ರೆಡ್ಡಿ, ಎಸ್ಪಿ ಡಾ| ಸಿ.ಬಿ.ವೇದಮೂರ್ತಿ ಸೇರಿ ಇತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next