ರಾಯಚೂರು: ಅನೇಕ ವರ್ಷಗಳಿಂದ ರಾಜ್ಯದಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಶನಿವಾರ ಎಸ್‌ಎಫ್‌ಐ, ಡಿವೈಎಫ್‌ಐ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಪದವೀಧರರ ಸಂಘದ ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಎದುರೇ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕಳೆದ ಮೂರು ದಶಕದಿಂದ ರಾಜ್ಯದಲ್ಲಿ ಖಾಲಿ ಇರುವ ಗ್ರಂಥಪಾಲಕ ಹುದ್ದೆಗಳ ಭರ್ತಿ ಮಾಡಿಲ್ಲ. ಒಂದೆಡೆ ನಿರುದ್ಯೋಗ ಸಮಸ್ಯೆ ಕಾಡುತ್ತಿದ್ದರೆ, ಮತ್ತೂಂದೆಡೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಪದವೀಧರರು ಕೆಲಸ ಇದ್ದರೂ ಪಡೆಯಲಾಗದೆ ಅಲೆಯುವ ಸ್ಥಿತಿ ಬಂದೊದಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ, ಪ್ರಥಮ ದರ್ಜೆ ಕಾಲೇಜು, ವಿವಿಗಳು ಸಂಶೋಧನಾ ಸಂಸ್ಥೆ, ಸಾರ್ವಜನಿಕ ಗ್ರಂಥಾಲಯಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ನೇಮಕಾತಿ ಮಾಡಬೇಕು ಹಾಗೂ ಗ್ರಂಥಾಲಯಕ್ಕೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು ಎಂದು ಆಗ್ರಹಿಸಿದರು.
ಪಿಯುಸಿ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಗ್ರಂಥಪಾಲಕರ ಹಾಗೂ ಗ್ರಂಥಾಲಯ ಸಹಾಯಕರ ಹುದ್ದೆಗಳನ್ನು ಸೃಷ್ಟಿಸಿ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಬೇಕು. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಗ್ರಂಥಪಾಲಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಗ್ರಂಥಪಾಲಕ, ಗ್ರಂಥಾಲಯ ಸಹಾಯಕರ ವೃತ್ತಿಗೆ ಎಂಲಿಬ್ ಅರ್ಹತೆ ಮಾನದಂಡ ಪರಿಗಣಿಸಬೇಕು. ಗುತ್ತಿಗೆ ಆಧಾರದ ನೇಮಕಾತಿ ಕೈಬಿಡಬೇಕು ಹಾಗೂ ಸರ್ಕಾರದಿಂದ ನಮ್ಮ ಸಂಘಟನೆಗೆ ಅನುದಾನ ನೀಡಬೇಕು. ಒಂದು ವರ್ಷದೊಳಗೆ ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ರಾಜ್ಯ ಕಾರ್ಯದರ್ಶಿ ಗುರುರಾಜ ದೇಸಾಯಿ, ಪದವೀಧರರ ಸಂಘದ ರಾಜ್ಯಾಧ್ಯಕ್ಷ ಪ್ರೇಮಕುಮಾರ, ಸದಸ್ಯರಾದ ದೇವಂತ, ಶಿವಪ್ಪ ಬ್ಯಾಗವಾಟ್, ರಮೇಶ, ಜುನೇದ ಮರ್ಚೆಡ್, ಸುರೇಶ ರಾಥೋಡ, ಭೀಮನಗೌಡ ಎಸ್. ರಮೇಶ ಮೀರಾಪುರ, ಲಿಂಗರಾಜ ಕಂದಗಲ್, ಬಸವರಾಜ, ಶಶಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.