Advertisement

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

12:09 AM Sep 06, 2024 | Esha Prasanna |

ಬೆಂಗಳೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್‌ ಬಳಿ ಶಾಲಾ ಬಸ್‌ ಮತ್ತು ಸರ್ಕಾರಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯ ಸಚಿವ ಎನ್‌.ಎಸ್‌. ಭೋಸರಾಜು ಆಘಾತ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಎಕ್ಸ್‌ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂಕಟ ವ್ಯಕ್ತಪಡಿಸಿದ್ದು, ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದಿದ್ದಾರೆ.

ರಸ್ತೆ ನಿಯಮ ಪಾಲಿಸಲು ಎಚ್‌ಡಿಕೆ ಕಳಕಳಿ
ಅದೇ ರೀತಿ ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ಎಕ್ಸ್‌ ಪೋಸ್ಟ್‌ ಹಾಕಿದ್ದು, ದುರಂತದಲ್ಲಿ ಮತ್ತಷ್ಟು ಮಕ್ಕಳು ತೀವ್ರ ಗಾಯಗೊಂಡು, ಕೆಲವರು ಕೈಕಾಲು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಅಪಘಾತದ ದೃಶ್ಯಗಳು ನನ್ನ ಮನಸ್ಸನ್ನು ಕಲಕಿ ಹಾಕಿವೆ. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ನಿರ್ಲಕ್ಷ್ಯ  , ಚಾಲಕರ ಅಸಡ್ಡೆ ಇಂಥ ದುರಂತಗಳಿಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ಸಾರಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.

ಮರುಕಳಿಸದಂತೆ ಕ್ರಮ: ಭೋಸರಾಜು
ಸಣ್ಣ ನೀರಾವರಿ ಸಚಿವ ಎನ್‌.ಎಸ್‌. ಭೋಸರಾಜು, ಪತ್ರಿಕಾ ಪ್ರಕಟಣೆ ನೀಡಿ, ಬೆಳಗ್ಗೆ ಈ ಬಗ್ಗೆ ಸುದ್ದಿ ತಿಳಿದ ಕೂಡಲೇ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡುವಂತೆ ಹಾಗೂ ಚಿಕಿತ್ಸೆಯ ಹಣ ಭರಿಸುವಂತೆ ಸೂಚನೆ ನೀಡಲಾಗಿದೆ.

ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖವಾಗಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next