ರಾಯಚೂರು: ಬಾಲ ಕಾರ್ಮಿಕರನ್ನು ರಕ್ಷಿಸುವಲ್ಲಿ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಸಂಬಂಧಿಸಿದವರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಐಸಿಡಿಎಸ್ ಮೇಲುಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಅತಿ ಪ್ರಮುಖ ಪಾತ್ರ ವಹಿಸುತ್ತದೆ. ಅದರೊಂದಿಗೆ ಶಿಕ್ಷಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಇದಕ್ಕೆ ಕೈ ಜೋಡಿಸಬೇಕು ಎಂದರು.
ಮಕ್ಕಳ ಸಹಾಯವಾಣಿಗೆ ಬರುವ ಕರೆಗಳನ್ನು ದಾಖಲಿಸಿಕೊಂಡು, ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಬೇಕು. ಅದರಲ್ಲಿ ಎಷ್ಟು ಪ್ರಕರಣಗಳನ್ನು ಯಶಸ್ವಿ ಕಾರ್ಯಾಚರಣೆ ಮಾಡಲಾಗಿದೆ ಎಂಬುದನ್ನು ಅಂಕಿ ಅಂಶಗಳೊಂದಿಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್ ಲೋಡ್ ಮಾಡಬೇಕು ಎಂದರು.
ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರಗಳಿಂದ 0-5 ವರ್ಷದ ತೂಕ ಕಡಿಮೆ ಇರುವ ಮಕ್ಕಳಿಗಾಗಿ ಪೌಷ್ಠಿಕ ಆಹಾರ ನೀಡುತ್ತಿದ್ದು, ಇದರಿಂದ 794 ಕಡಿಮೆ ತೂಕದ ಮಕ್ಕಳು ಸುಧಾರಣೆ ಕಂಡಿದ್ದಾರೆ. ಪ್ರತಿ ತಿಂಗಳಿಗೊಮ್ಮೆ ನುರಿತ ವೈದ್ಯರಿಂದ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಇದರಿಂದ ಅಪೌಷ್ಟಿಕತೆ ಕಡಿಮೆ ಮಾಡಲು ಸಹಕಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ವಿವರಿಸಿದರು.
ಈ ವೇಳೆ ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ ಜಿ., ಐಎಎಸ್ ಪ್ರೋಬೆಷನರಿ ಅಧಿಕಾರಿ ಯುಕೇಶಕುಮಾರ, ಡಿಡಿಪಿಐ ಡಿ.ಎಚ್. ಗೋನಾಳ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗ್ಡೆ, ಗಿಲ್ಲೆಸೂಗೂರು ಸಿಡಿಪಿಒ ಮಂಜುನಾಥ, ಅಬಕಾರಿ ಇಲಾಖೆ ಉಪ ಆಯುಕ್ತರಾದ ಕೆ.ಪ್ರಶಾಂತಕುಮಾರ, ದೇವದುರ್ಗ ಸಿಡಿಪಿಒ ಮಹೇಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿ ಕಾರಿ ರಾಮಕೃಷ್ಣ ಸೇರಿ ಇತರರಿದ್ದರು.