Advertisement

ಸ್ರ್ತೀ ಸಶಕ್ತೀಕರಣಕ್ಕೆ ಸರ್ಕಾರ ಬದ್ಧ : ಶ್ರೀರಾಮುಲು

07:39 PM Jan 27, 2020 | Naveen |

ರಾಯಚೂರು: ಮಹಿಳಾ ಸಶಕ್ತೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ರೂ. ವ್ಯಯಿಸಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

Advertisement

ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದಿಂದ ರವಿವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ಸ್ತ್ರೀ ಶಕ್ತಿ ಮಹಿಳಾ ಸಮಾವೇಶ-2020 ಉದ್ಘಾಟಿಸಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳಲ್ಲಿ ಮುಖ್ಯವಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿರುತ್ತವೆ. ಅದರಲ್ಲೂ ಬಡ ಹೆಣ್ಣು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಈ ಭಾಗದಲ್ಲಿ ಅಪೌಷ್ಟಿಕತೆಯಿಂದ ಬಳಲುವ ಮಹಿಳೆಯರಿಗೆ, ಮಕ್ಕಳಿಗೆ ಐರನ್‌ ಹಾಗೂ ಕ್ಯಾಲ್ಸಿಯಂ ಮಾತ್ರೆಗಳ ವಿತರಣೆಗಾಗಿ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಗರ್ಭಕೋಶದ ಕ್ಯಾನ್ಸರ್‌ ತಪಾಸಣಾ ಕೇಂದ್ರ ಆರಂಭಿಸಲಾಗಿದೆ. ಸ್ತ್ರೀ ಶಕ್ತಿ ಸಂಘಗಳಿಗೂ ಸರ್ಕಾರ ಅನೇಕ ಸೌಲಭ್ಯ ಕಲ್ಪಿಸಿದ್ದು, ಅವುಗಳನ್ನೂ ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ಥಿತಿವಂತರಾಗಬೇಕು ಎಂದರು.

ನಮ್ಮ ದೇಶದಲ್ಲಿ ಮಹಿಳೆಗೆ ಪೂಜ್ಯನೀಯ ಸ್ಥಾನವಿದೆ. ಮಹಿಳೆಯರು ಶಿಕ್ಷಿತರಾದರೆ ಕುಟುಂಬ, ಇಡೀ ದೇಶವೇ ಪ್ರಗತಿ ಹೊಂದಲಿದೆ. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ಬಚಾವೋ ಭೇಟಿ ಪಡಾವೋ ಸೇರಿದಂತೆ ಇನ್ನಿತರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮೀ ಬಾಂಡ್‌ ಯೋಜನೆ ಜಾರಿಗೆ ತಂದಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರ ಏಳಿಗೆಗಾಗಿ ಸರ್ಕಾರ ಶ್ರಮಿಸುತ್ತಿದೆ ಎಂದರು.

ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಮಾತನಾಡಿ, ಇಂದು ಹಳ್ಳಿಗಳಲ್ಲೂ ಮಹಿಳೆಯರು ಹಣಕಾಸು ವಹಿವಾಟು ನಡೆಸುತ್ತಿದ್ದಾರೆ. ಸ್ತ್ರೀ ಶಕ್ತಿ ಸಂಘಗಳನ್ನು ಕಟ್ಟಿಕೊಂಡು ಸಬಲರಾಗಿದ್ದಾರೆ. ಸ್ವಂತ ಉದ್ಯಮ ಸ್ಥಾಪಿಸಿ ಯಶಸ್ವಿ ಉದ್ಯಮಿಗಳಾಗಿದ್ದಾರೆ. ಮಹಿಳೆಯರ ಮೇಲಿನ ಶೋಷಣೆ, ಭ್ರೂಣ ಹತ್ಯೆ ನಿಲ್ಲಬೇಕು. ಜಿಲ್ಲೆಯಲ್ಲಿ ಮಹಿಳಾ ಶಿಕ್ಷಣಕ್ಕೆ ಇನ್ನೂ ಹೆಚ್ಚಿನ ಒತ್ತು ಸಿಗಬೇಕು. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು. ಮಹಿಳೆಯರನ್ನು ಯಾವುದೇ ಕಾರಣಕ್ಕೂ ಕೀಳಾಗಿ ಕಾಣಬಾರದು ಎಂದರು.

Advertisement

ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ  ಬಾಂಡ್‌ ವಿತರಿಸಲಾಯಿತು. ಮಹಿಳಾ ಸಂಘಗಳಿಂದ ವಿವಿಧ ಮಳಿಗೆಗಳನ್ನು ತೆರೆಯಲಾಗಿತ್ತು. ನಗರ ಶಾಸಕ ಡಾ| ಶಿವರಾಜ ಪಾಟೀಲ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ಜಿಲ್ಲಾ ಧಿಕಾರಿ ಆರ್‌.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀ ಕಾಂತರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿ.ಬಿ. ವೇದಮೂರ್ತಿ ಸೇರಿ ಇನ್ನಿತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next