ರಾಯಚೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಯಚೂರು ವಿಶ್ವವಿದ್ಯಾಲಯ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಸಿ.ಎನ್. ಹೇಳಿದರು.
ನಗರದ ಹೊರವಲಯದಲ್ಲಿರುವ ರಾಯಚೂರು ಸ್ನಾತಕೋತ್ತರ ಕೇಂದ್ರದಲ್ಲಿ ಮಂಗಳವಾರ ನಡೆದ ವಿವಿಧ ವಿಭಾಗೀಯ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೆ ಹಲವು ವರ್ಷಗಳಿಂದ ಪ್ರಯತ್ನ ನಡೆದಿತ್ತು. ಈ ನಿಟ್ಟಿನಲ್ಲಿ ಹಲವು ಬಾರಿ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು. ರಾಯಚೂರು ವಿಶ್ವವಿದ್ಯಾಲಯದ ಆರಂಭಕ್ಕೆ ಹಲವು ಬಾರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದನ್ನು ಸಂಪುಟ ಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದು ಇದೀಗ ತ್ವರಿತವಾಗಿ ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಮುಖ್ಯವಾಗಿ ನರ್ಸರಿಯಿಂದಲೇ ಶಿಕ್ಷಣ ಗುಣಮಟ್ಟ ಉತ್ತಮವಾಗಿದ್ದಲ್ಲಿ ಅದು ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲಿದೆ. ವಿಶಿಷ್ಠ ಹಾಗೂ ವಿಶೇಷವಾಗಿ ಹಾಗೂ ತ್ವರಿತವಾಗಿ ಈ ವಿಶ್ವವಿದ್ಯಾಲಯವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.
ವಿಶ್ವವಿದ್ಯಾಯದ ವಿಶೇಷಾಧಿಕಾರಿ ಮುಜಾಫರ್ ಅಸಾದಿ ಮಾತನಾಡಿ, ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾದರೆ ಹಿಂದುಳಿದ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗುತ್ತದೆ. ರಾಯಚೂರು ವಿಶ್ವವಿದ್ಯಾಲಯ ನಿರ್ಮಾಣದ ಬಗ್ಗೆ 2016 ರಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಸ್ತಾಪಿಸಲಾಗಿತ್ತು. ವಿಶ್ವವಿದ್ಯಾಲಯ ನಿರ್ಮಾಣವಾದರೆ ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗುತ್ತದೆ. ಜಿಲ್ಲೆಯ ಹಲವು ಖಾಸಗಿ ಕಾಲೇಜುಗಳು ಇದರ ವ್ಯಾಪ್ತಿಯಲ್ಲಿ ಬರುತ್ತವೆ. ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಭವಿಷ್ಯದ ಆಧಾರದ ಮೇಲೆ 300 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯ ನಿರ್ಮಾಣವಾದಲ್ಲಿ ಅದು ಉತ್ತಮ. ಅದಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳು ಒದಗಿಸಬೇಕೆಂದು ಸರ್ಕಾರಕ್ಕೆ ಬೇಡಿಕೆ ನೀಡಲಾಗಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ| ಶಿವರಾಜ ಪಾಟೀಲ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ವಿಶ್ವವಿದ್ಯಾಲಯದ ಕುಲಪತಿಗಳು, ವಿವಿಧ ವಿಭಾಗಗಳ ಅಧಿಕಾರಿಗಳು, ಶಿಕ್ಷಣ ಸಂಸ್ಥೆ ಸಿಬ್ಬಂದಿ ಉಪಸ್ಥಿತರಿದ್ದರು.