ರಾಯಚೂರು: ನವೋದಯ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿಗೆ ನ್ಯಾಯ ಕಲ್ಪಿಸಬೇಕು ಎಂಬ ಕೂಗು ದಿನೇ ದಿನೇ ಬಲಗೊಳ್ಳುತ್ತಿದ್ದು, ಜನಾಕ್ರೋಶ ಭುಗಿಲೆದ್ದಿತ್ತು. ಗುರುವಾರ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದು, ಲಘು ಲಾಠಿ ಪ್ರಹಾರ ಮಾಡಲಾಗಿದೆ.
ಜಿಲ್ಲಾ ವಿಶ್ವಕರ್ಮ ಸಮಾಜದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಯುವಕರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ನಗರದ ಮಾಣಿಕ್ ಪ್ರಭು ದೇವಸ್ಥಾನದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಡಾ.ಅಂಬೇಡ್ಕರ್ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದರು. ಸುಮಾರು ಎರಡು ಸಾವಿರಕ್ಕೂ ಅಧಿಕ ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ‘ಡಿಸಿ ಡೌನ್ ಡೌನ್’ ಎಂದು ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಗೇಟ್‌ಗಳನ್ನು ಮುಚ್ಚಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರೂ ಯುವಕರು ಒಳಗೆ ನುಗ್ಗಲೆತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನ ಮಾಡಿದಾಗ ಉದ್ರೇಕಗೊಂಡ ಯುವಕರು ಕಲ್ಲು ತೂರಾಟ ಮಾಡಿದರು. ಈ ವೇಳೆ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ಅವರ ತಲೆಗೆ ಕಲ್ಲು ತಾಗಿ ಗಾಯವಾಗಿದೆ. ಇದೇ ವೇಳೆ ಯುವಕರು ಚಪ್ಪಲಿ, ನೀರಿನ ಬಾಟಲಿಗಳನ್ನು ಎಸೆದಿದ್ದಾರೆ. ಆಗ ಪೊಲೀಸರು ಲಾಠಿ ಬೀಸುವ ಮೂಲಕ ಯುವಕರನ್ನು ಚದುರಿಸುವ ಕೆಲಸ ಮಾಡಿದರು. ಚಪ್ಪಲಿ ಎಸೆಯುತ್ತಿದ್ದ ಶಿವಕುಮಾರ್ ಎಂಬಾತನನ್ನು ಬಂಧಿಸಲಾಗಿದೆ. ಇದಕ್ಕೂ ಮುನ್ನ ವಿಶ್ವಕರ್ಮ ಸಮಾಜದ ಮುಖಂಡ ಮಾರುತಿ ಬಡಿಗೇರ್ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದಾಗ ತಡೆದ ಪೊಲೀಸರು ಇನ್ನಿಬ್ಬರನ್ನು ರಿಮ್ಸ್‌ಗೆ ಕರೆದೊಯ್ದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶರತ್ ಬಿ. ಮನವಿ ಸ್ವೀಕರಿಸಿ ಮಾತನಾಡಿ, ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಆದರೆ, ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳದೆ ಶಾಂತಿಯುತವಾಗಿ ನಡೆದುಕೊಳ್ಳಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಸೂಕ್ತ ಶಿಕ್ಷೆ ಆಗಲಿದೆ ಎಂದರು.
ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಮಾತನಾಡಿ, ತನಿಖೆ ಹಾದಿ ತಪ್ಪದಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ನೀಡಿದರು. ದಾರಿಯುದ್ದಕ್ಕೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ವರ್ತಕರು ಸ್ವಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳಿಗೆ ಬೀಗ ಹಾಕಿದ್ದರು.