ಮುಂಬೈ: ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯ್ ಗಢ್ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಾಯ್ ಗಢದ ಕಾಜಲ್ ಪುರ್ ಎಂಬಲ್ಲಿ ಈ ಘಟನೆ ಸಂಭವಿಸಿದೆ.
ಐದು ಅಂತಸ್ತಿನ ಕಟ್ಟಡದಲ್ಲಿ 41 ಫ್ಲ್ಯಾಟ್ಸ್ ಇದ್ದು, 85 ಮಂದಿ ವಾಸವಾಗಿದ್ದರು. ಕಟ್ಟಡ ದಿಧೀರನೇ ಕುಸಿದು ಬೀಳಲು ಕಾರಣ ಏನು ಎಂಬುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದದ್ದು ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಸೋಮವಾರ ಸಂಜೆ ರಾಯ್ ಗಢ ಜಿಲ್ಲೆಯ ಕಾಜಲ್ ಪುರ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಸುಮಾರು 25 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಈವರೆಗೆ 60 ಮಂದಿಯನ್ನು ರಕ್ಷಿಸಲಾಗಿದೆ. ರಾಯ್ ಗಢ ಜಿಲ್ಲೆಯಲ್ಲಿ ಸಂಭವಿಸಿದ ಕಟ್ಟಡ ಕುಸಿತ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶಾಸಕ ಗೋಗಾವಾಲೆ ಹಾಗೂ ಜಿಲ್ಲಾಧಿಕಾರಿ ನಿಧಿ ಚೌಧರಿ ಜತೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ. ಅಲ್ಲದೇ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿ, ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.