Advertisement
ಪ್ರವಾಸಿ ಮಂದಿರದಲ್ಲಿ ರವಿವಾರ ತಮ್ಮ ಕಚೇರಿ ಉದ್ಘಾಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ 61 ರೈಲ್ವೇ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, ಶೀಘ್ರದಲ್ಲೇ ಕೆಲಸ ಪ್ರಾರಂಭವಾಗಲಿದೆ. ಬೆಂಗಳೂರಿನ ಕಂಟೋನ್ಮೆಂಟ್, ಯಶವಂತಪುರ ಸೇರಿದಂತೆ ರಾಜ್ಯದ ಇತರೆಡೆ 118 ಕೋಟಿ ರೂ. ವೆಚ್ಚದಲ್ಲಿ ವ್ಯವಸ್ಥಿತ ರೈಲ್ವೇ ನಿಲ್ದಾಣಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ತುಮಕೂರಿನ ಗುಬ್ಬಿ ರೈಲ್ವೇ ನಿಲ್ದಾಣ 7 ಕೋಟಿ ರೂ. ವೆಚ್ಚದಲ್ಲಿ ಹಾಗೂ ಹಾಸನದ ಶ್ರವಣಬೆಳಗೊಳ ರೈಲು ನಿಲ್ದಾಣವನ್ನು 9 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣಗೊಳಿಸ ಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಿಂದ ಹುಬ್ಬಳ್ಳಿಗೆ ತುಮಕೂರು ಮೂಲಕ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು, ತುಮಕೂರಿನಲ್ಲಿ ಆ. 24ರಿಂದ ಸಂಜೆ 6 ಗಂಟೆಗೆ ಪ್ರತಿನಿತ್ಯ ನಿಲುಗಡೆಯಾಗಲಿದೆ. ತುಮಕೂರು ರೈಲ್ವೇ ನಿಲ್ದಾಣಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು, ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡುವಂತೆಯೂ ಪತ್ರಗಳು ಬಂದಿವೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆಯೂ ತಿಳಿಸಲಾಗಿದೆ ಎಂದು ಸೋಮಣ್ಣ ತಿಳಿಸಿದರು.