ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದ್ದು, ಮೇ 14ರಂದು ಉಡುಪಿ, ಶಿವಮೊಗ್ಗ, ಕೊಡಗು ಸಹಿತ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ದಾವಣಗೆರೆ, ಬಳ್ಳಾರಿ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷೆಯಿದೆ.
ಮೇ 15ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಮೇ 16ರಂದು ಉಡುಪಿ ಮತ್ತು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆಗಳಿವೆ.
ಮೇ 17ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು. ಮೇ 18ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಮೇ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುಖ್ಯಸ್ಥ ಡಾ| ಎನ್. ಪುವಿಯರಸನ್ ತಿಳಿಸಿದ್ದಾರೆ.