Advertisement

ಮಳೆ ಹಾನಿ: ಜಿಲ್ಲಾಡಳಿತದಿಂದ ಅಗತ್ಯ ಪರಿಹಾರ ಕ್ರಮ

05:57 PM Aug 03, 2022 | Team Udayavani |

ಮಂಗಳೂರು: ದ.ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದ ಹಾನಿಗೊಳಗಾದ ನಾಗರಿಕರಿಗೆ ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|ಕೆ.ವಿ. ರಾಜೇಂದ್ರ ಅವರು ತಿಳಿಸಿದರು.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ಬೆಂಗಳೂರಿನಿಂದ ಹಮ್ಮಿಕೊಂಡಿದ್ದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಯವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ತೀವ್ರ ಮಳೆಯಾಗಿದ್ದು ಇದೂವರೆಗೆ ಒಟ್ಟು 30 ಮನೆಗಳಿಗೆ ಹಾನಿಯಾಗಿದೆ, 5 ಮನೆಗಳು ಸಂಪೂರ್ಣವಾಗಿ ಹಾನಿಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಪರ್ವತ ಮುಖೀಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ, ಅವರ ಕುಟುಂಬಕ್ಕೆ ಈಗಾಗಲೇ ಪರಿಹಾರವನ್ನು ಪಾವತಿಸಲಾಗಿದೆ, 3 ಪ್ರಾಣಿಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ.ಅತಂತ್ರಗೊಂಡವರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದರು.

ಕೆಲವೆಡೆ ವಾಣಿಜ್ಯ ಸಂಕೀರ್ಣಗಳು ಹಾನಿಗೊಳಗಾಗಿವೆ, ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿ ತುಂಬಿ ಹರಿದಿದ್ದು ಆದಿ ದೇಗುಲದ ಗರ್ಭಗುಡಿಯೊಳಗೂ ನೀರು ಹರಿದಿದೆ. ಸುಬ್ರಹ್ಮಣ್ಯಕ್ಕೆ ಹೊಂದಿಕೊಂಡಿರುವ ಬಾಳುಗೋಡು, ಕೊಲ್ಲಮೊಗ್ರ, ಕಲ್ಮಕಾರು ಹಾಗೂ ಇತರೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ, ಎರಡು ತಾಲೂಕುಗಳಲ್ಲಿ ಒಟ್ಟು 23 ಕಡೆ ಹಾನಿಯಾಗಿದ್ದು ಅದನ್ನು ದುರಸ್ತಿ ಪಡಿಸಲು ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.

ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.

Advertisement

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್‌ ಐಎಸ್‌ಎನ್‌ ಪ್ರಸಾದ್‌, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಕೃಷ್ಣಾ ರೆಡ್ಡಿ, ಪ್ರಕೃತಿ ವಿಕೋಪ ನಿರ್ವಹಣಾ ಸೆಲ್‌ ಮುಖ್ಯಸ್ಥ ಮನೋಜ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next