ಬೆಂಗಳೂರು: ಫನಿ ಚಂಡಮಾರುತದ ಪರಿಣಾಮ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಚಂಡಮಾರುತ ನಿಧಾನವಾಗಿ ವಾಯುವ್ಯ ದಿಕ್ಕಿನ ಕಡೆಗೆ ಚಲಿಸುತ್ತಿದೆ. ಪರಿಣಾಮ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಕೆಲವೆಡೆ ಮಳೆಯಾಗಿದೆ.
ಬಂಗಾಳಕೊಲ್ಲಿಯಿಂದ ಚಂಡಮಾರುತವು ವಾಯುವ್ಯ ದಿಕ್ಕಿನ ಕಡೆಗೆ ಗಂಟೆಗೆ 6 ಕಿ.ಮೀ.ವೇಗದಲ್ಲಿ ಚಲಿಸುತ್ತಿದ್ದು, ಅದರ ಪ್ರಭಾವ ರಾಜ್ಯದ ಕರಾವಳಿಯ ಮೇಲೆ ಹೆಚ್ಚಾಗಿರಲಿದೆ. ಹೀಗಾಗಿ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು-ಮಿಂಚು ಸಹಿತ ಮಳೆಯಗುವ ಸಾಧ್ಯತೆಯಿದೆ.
ಬುಧವಾರ ಹಾವೇರಿಯಲ್ಲಿ 132 ಮಿಲಿ ಮೀಟರ್ ಮಳೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು, ಚಾಮರಾಜನಗರ, ಬಳ್ಳಾರಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮುಂದಿನ ಎರಡು ಮೂರು ದಿನಗಳು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.