Advertisement

ಕೋವಿಡ್ ಹೆಚ್ಚಳವಾಗಿರುವ ಮುಂಬೈನಲ್ಲೂ ಐಪಿಎಲ್ ಪಂದ್ಯಗಳು ನಡೆಯಲಿವೆ: ರಾಜೀವ್ ಶುಕ್ಲಾ

05:45 PM Apr 04, 2021 | Team Udayavani |

ನವದೆಹಲಿ : ದೇಶದಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ ನಿಂದ ಐಪಿಎಲ್ ಪಂದ್ಯಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿದ್ದಾರೆ.

Advertisement

ಇಂದು ಮಾಧ್ಯಮಗಳ ಎದುರು ಮಾತನಾಡಿರುವ ಅವರು 14ನೇ ಆವೃತ್ತಿಯ ಐಪಿಎಲ್ ಪಂದ್ಯಗಳು ಯಾವುದೇ ಅಡ್ಡಿ-ಆತಂಕಗಳಿಲ್ಲದೆ ಸರಾಗವಾಗಿ ನಡೆಯಲಿವೆ ಎಂದು ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರ ಬಗ್ಗೆ ಆತಂಕ ಇದೆ. ಆದ್ದರಿಂದ ಕೇವಲ 6 ಸ್ಥಳಗಳಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲಾಗುತ್ತಿದೆ.ಮೈದಾನದಲ್ಲಿ ಆಟಗಾರರಿಗೆ ಬಯೋ ಬಬಲ್ ವ್ಯವಸ್ಥೆ ( ಆರೋಗ್ಯಯುತ ವಾತಾವರಣ ) ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕಣಗಳು ಹೆಚ್ಚುವ ಸಾಧ್ಯತೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವತ್ತ ಗಮನ ಹರಿಸಿದ್ದೇವೆ ಎಂದು ಶುಕ್ಲಾ ಹೇಳಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಕುರಿತು ಗಮನ ಕೊಡಲಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್ ಪಂದ್ಯಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿಲ್ಲ. ಪ್ರೇಕ್ಷಕರಿಲ್ಲದ ಮೈದಾನದಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಈಗಾಗಲೇ ಬಯೋ ಬಬಲ್ ಸ್ಥಾಪಿಸಲಾಗಿದೆ. ಬಯೋ ಬಬಲ್‍ನಲ್ಲಿರುವ ಆಟಗಾರರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬೈನಲ್ಲಿ ಪಂದ್ಯಗಳು :

Advertisement

ಇನ್ನು ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಮಹಾರಾಷ್ಟ್ರದಲ್ಲಿ ಐಪಿಎಲ್ ಪಂದ್ಯಗಳು ನಡೆಯುವುದು ಅನುಮಾನ ಎನ್ನುವ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಶುಕ್ಲಾ, ಮುಂಬೈನಲ್ಲಿ ನಡೆಯಲಿರುವ ಪಂದ್ಯಗಳನ್ನು ಬೇರೆಡೆ ಸ್ಥಳಾಂತರಿಸುವ ಕುರಿತು ಇದುವರೆಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಈಗಾಗಲೇ ಮುಂಬೈನ ಕ್ರಿಡಾಂಗಣಗಳಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಯಾವುದೇ ಸಮಸ್ಯೆಯುಂಟಾದರೆ ಪಂದ್ಯಗಳ ಸ್ಥಳಾಂತರದ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next