ಬೆಂಗಳೂರು: ರಾಜ್ಯಸಭಾ ಟಿಕೆಟ್ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರೆಂಬ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರವಿವಾರ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಇತ್ಯರ್ಥವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿರುವ ಅವರು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಈಗಾಗಲೇ ಚರ್ಚೆ ನಡೆಸಿದ್ದೇನೆ. ಮೈಸೂರಿನಲ್ಲಿ ರವಿವಾರ ನಡೆಯುವ ಸಭೆಯಲ್ಲಿ ರಾಜಕೀಯ ವಿಚಾರವೂ ಚರ್ಚೆಯಾಗಲಿದೆ. ಅಮಿತ್ ಶಾ ಆಗಮನಕ್ಕಾಗಿ ನಾವೆಲ್ಲರೂ ಕಾತುರದಿಂದ ಕಾದಿದ್ದೇವೆ.
ಇದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರದ ನಾಯಕರು ರಾಜ್ಯದ ಕೆಲವು ಆಯ್ದ ಕ್ಷೇತ್ರಗಳಿಂದ ಲೋಕಸಭಾ ಚುನಾವಣ ಕಣಕ್ಕೆ ಇಳಿಯುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ಹೆಚ್ಚು ಬೆಳೆಸುವ ಬಗ್ಗೆ ಉತ್ಸಾಹ ತೋರದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಬೆಂಗಳೂರು ದಕ್ಷಿಣ ಹಾಗೂ ಉತ್ತರ ಕನ್ನಡ ಅಥವಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ಪ್ರಬಲವಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜೈ ಶಂಕರ್ ಸ್ಪರ್ಧೆ ಖಚಿತ ಎಂಬಂಥ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರಿಗೆ ಕಾಡುತ್ತಿರುವ ಮಾಹಿತಿ ಕೊರತೆ ಮಹತ್ವ ಪಡೆದುಕೊಂಡಿದೆ. ಕೆಲವು ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳು ಯಾರೆಂಬ ಪ್ರಶ್ನೆ ಬಂದಾಗ ಕೇಂದ್ರ ನಾಯಕರು ಪರ್ಯಾಯ ಯೋಚನೆಯಲ್ಲಿ ಇದ್ದಾರೆ ಎಂದೇ ವಿಜಯೇಂದ್ರ ಆಪ್ತ ಬಳಗದ ಜತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯ ನಾಯಕರ ನಡೆ ಮಗುಮ್ಮಾಗಿಯೇ ಇದೆ.