ಹೊಸದಿಲ್ಲಿ: ಇದೇ ಬರುವ ಜ.22 (ಸೋಮವಾರ) ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದೆ. ಹೀಗಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಅಂದು ಅರ್ಧ ದಿನ ರಜೆ ಘೋಷಿಸಲಾಗಿದೆ.
ಕೇಂದ್ರ ಸರ್ಕಾರ ಇಂದು ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರಿ ನೌಕರರು ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರವನ್ನು ನೋಡುವ ಸಲುವಾಗಿ ಸೋಮವಾರ ಅರ್ಧ ದಿನ ರಜೆ ನೀಡಲಾಗಿದೆ.
ಜನವರಿ 22ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ಇರಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಖಚಿತಪಡಿಸಿದ್ದು, ಸರ್ಕಾರ ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಅದ್ಧೂರಿ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಚಿವರಿಂದ ಪ್ರತಿಕ್ರಿಯೆಯನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಭಗವಾನ್ ರಾಮನ ಜನ್ಮಸ್ಥಳವೆಂದು ನಂಬಲಾದ ಉತ್ತರ ಪ್ರದೇಶದ ಅಯೋಧ್ಯೆ ಪಟ್ಟಣವು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಸಿದ್ದವಾಗಿದೆ. ಈ ಅದ್ಧೂರಿ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ನಟರು ಮತ್ತು ಕ್ರಿಕೆಟಿಗರು ಸೇರಿದಂತೆ ಹಲವಾರು ಗಣ್ಯ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.
ಜ.22ರಂದು ಕೆಲವು ರಾಜ್ಯಗಳಲ್ಲಿ ಈಗಾಗಲೇ ರಜೆ ಘೋಷಿಸಲಾಗಿದೆ. ಉತ್ತರ ಪ್ರದೇಶ, ಗೋವಾ ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಛತ್ತೀಸ್ ಗಢ ಮತ್ತು ಹರ್ಯಾಣದಲ್ಲಿ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗಿದೆ.