ನವದೆಹಲಿ: ಗುರುವಾರ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.
ಕೇಂದ್ರ ಸಂಪುಟವು ಶುಕ್ರವಾರ ಈ ಕುರಿತು ನಿರ್ಧಾರ ಕೈಗೊಂಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಗಲಿದ ನಾಯಕನಿಗೆ ವಿದಾಯ ಹೇಳಲು ನಿರ್ಣಯಿಸಿದೆ.
ಇದೇ ವೇಳೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖ ಗಣ್ಯರು ಶುಕ್ರವಾರ ನವದೆಹಲಿಯ ಅವರ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ.
ಇದನ್ನೂ ಓದಿ:ಜಮ್ಮು ಕಾಶ್ಮೀರ: ಕುಲ್ಗಾಮ್ ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಗೋಯಲ್‌ಗೆ ಹೆಚ್ಚುವರಿ ಹೊಣೆ: ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ, ಅವರು ನಿರ್ವಹಿಸುತ್ತಿದ್ದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್‌ಗೆ ವಹಿಸಲಾಗಿದೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.