Advertisement

ಹೆಸರು ನಾಪತ್ತೆ ತನಿಖೆಗೆ ರಾಮಲಿಂಗಾ ರೆಡ್ಡಿ ಮನವಿ

12:34 AM Apr 24, 2019 | Lakshmi GovindaRaju |

ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಆಗಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

Advertisement

ಮಂಗಳವಾರ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಜೊತೆ ನಿಯೋಗದಲ್ಲಿ ತೆರಳಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ನೀಡಿದ್ದು, ನಗರದ ಬಹುತೇಕ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ತೆಗೆದು ಹಾಕಲಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿದವರ ಹೆಸರು ಈ ಚುನಾವಣೆಯಲ್ಲಿ ತೆಗೆದು ಹಾಕಲಾಗಿದೆ. ಇದರಲ್ಲಿ ಅಧಿಕಾರಿಗಳ ಲೋಪ ಎದ್ದು ಕಾಣುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವಾರು ಮತ ಕೇಂದ್ರಗಳಲ್ಲಿ ಮತದಾರರ ಪಟ್ಟಿಯಲ್ಲಿರುವವರ ಹೆಸರುಗಳನ್ನು ತೆಗೆದು ಹಾಕಿದ್ದು, ಮೃತ ಪಟ್ಟವರು ಮತ್ತು ಮನೆ ಬದಲಾಯಿಸಿರುವ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈ ಬಿಡದೇ ಹಾಗೇ ಉಳಿಸಿಕೊಳ್ಳಲಾಗಿದೆ.

ಒಂದೇ ಕುಟುಂಬದ ಮತದಾರರ ಹೆಸರುಗಳನ್ನು ಬೇರೆ ಬೇರೆ ಮತ ಕೇಂದ್ರಗಳಿಗೆ ವರ್ಗಾಯಿಸಲಾಗಿದೆ. ಆನ್‌ಲೈನ್‌ನಲ್ಲಿರುವ ಮಾಹಿತಿಗೂ ಮತದಾರರ ಪಟ್ಟಿಯಲ್ಲಿರುವ ಮಾಹಿತಿಗೂ ವ್ಯತ್ಯಾಸವಿರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ರೀತಿಯ ಬದಲಾಣೆಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

Advertisement

ಇದೇ ವೇಳೆ, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ಅವರೊಂದಿಗೆ ಮಾತುಕತೆ ನಡೆಸುತ್ತಾರೆ. ಅವರ ಮನೆಯಲ್ಲಿಯೇ ಸಚಿವರಿದ್ದಾರೆ ಅವರೇ ಸಮಾಧಾನ ಮಾಡಬಹುದು ಎಂದು ಹೇಳಿದರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬಿಜೆಪಿಯವರು ಸರ್ಕಾರವನ್ನು ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆ ಎಂದು ಹೇಳುವ ಬಿಜೆಪಿಯವರು ಅಸ್ತಿತ್ವದಲ್ಲಿರುವ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿರುವುದು ದ್ವಂದ್ವ ನೀತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಶ್ರೀಲಂಕಾ ಮೃತರ ತರುವ ಕೆಲಸ ಅವ್ಯಾಹತ: ಶ್ರೀಲಂಕಾದಲ್ಲಿ ಭಾನುವಾರ ಬಾಂಬ್‌ ನ್ಪೋಟ ಪ್ರಕರಣದಲ್ಲಿ ನಮ್ಮ ಸಂಬಂಧಿಕರಾದ ನಾಗರಾಜ ರೆಡ್ಡಿ ಸಾವಿಗೀಡಾಗಿದ್ದಾರೆ. ಪುರುಷೋತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರೂ ನಮ್ಮ ಸಂಬಂಧಿಕರು ಹಾಗೂ ಕ್ಷೇತ್ರದವರಾಗಿದ್ದಾರೆ. ಅವರನ್ನು ವಾಪಸ್‌ ಕರೆತರುವ ಪ್ರಯತ್ನ ನಡೆದಿದೆ. ಶ್ರೀಲಂಕಾಕ್ಕೆ ತೆರಳಿರುವ ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹಾಗೂ ಕೊಲಂಬೋದಲ್ಲಿರುವ ಸ್ನೇಹಿತರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next