ಹಾಸನ: ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಕೋವಿಡ್ ಕೇರ್ ಕೇಂದ್ರದಲ್ಲಿ ಬರೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಿಇಟಿ ಪರೀಕ್ಷೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಕೋವಿಡ್ ಕೇರ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ಪರೀಕ್ಷಾ ಕೊಠಡಿ ವೀಕ್ಷಕರಾಗಿ ಬಳಸಿ ಪರೀಕ್ಷೆ ನಡೆಸಿ ಎಂದರು. ಕೋವಿಡ್ ಸೋಂಕಿತ ವಿದ್ಯಾರ್ಥಿಗಳ ಪರೀಕ್ಷಾ ಕೊಠಡಿ ವೀಕ್ಷಕರಿಗೆ ಪಿ.ಪಿ.ಇ. ಕಿಟ್ ಮತ್ತು ಕೈಗವಸುಗಳನ್ನು ನೀಡಿ, ಪ್ರಶ್ನೆ ಪತ್ರಿಕೆ ವಿತರಣೆ ಹಾಗೂ ಉತ್ತರ ಪತ್ರಿಕೆ ಸಂಗ್ರಹಿಸುವ ಕಾರ್ಯ ಮಾಡುವಂತೆ ಸೂಚನೆ ನೀಡಬೇಕು ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನೀಡಬೇಕು ಎಂದರು.
ಕಂಟೈನ್ಮೆಂಟ್ ವಲಯದ ವಿದ್ಯಾರ್ಥಿಗಳಿಗೆ ಹಾಗೂ ಕ್ವಾರಂಟೈನ್ ಕೇಂದ್ರದಲ್ಲಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯಗಳಲ್ಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರವೇಶ ಪತ್ರ ಪಡೆಯಲು ಬಂದರೆ ಅಂತಹವರಿಗೆ ಅವಕಾಶ ನೀಡಬೇಕು. ಹೊರ ರಾಜ್ಯಗಳಿಂದ ಹಾಗೂ ದೇಶಗಳಿಂದ ಬರುವ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿ ನಂತರ ಪ್ರವೇಶಪತ್ರ ನೀಡಿ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ರಮಣ ರೆಡ್ಡಿ ಸೂಚಿಸಿದರು.
ಪರೀಕ್ಷೆ ನಡೆಯುವ ಎರಡೂ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಯಾವುದೇ ತೊಂದರೆಯಾಗದಂತೆ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ಸೋಂಕಿತ ವಿದ್ಯಾರ್ಥಿಗಳಿಗೆ 108 ಆ್ಯಂಬುಲೆನ್ಸ್ ವಾಹನಗಳ ವ್ಯವಸ್ಥೆ ಮಾಡಬೇಕು ಎಂದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳು ಹೆಚ್ಚಾಗಿದ್ದು, ಎಲ್ಲಾ ವಿದ್ಯಾರ್ಥಿಗಳ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿಳಾಸ ಸಂಗ್ರಹಿಸಲಾಗಿದೆ. ಪ್ರಾಥಮಿಕ ಹಂತದ ಶಂಕಿತ ವಿದ್ಯಾರ್ಥಿಗಳ ಕುರಿತು ಜಿಲ್ಲಾ ಸಹಾಯವಾಣಿ ಮೂಲಕ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಎ.ಎಸ್ಪಿ ಬಿ.ಎನ್. ನಂದಿನಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಕೆ. ಶ್ರೀನಿವಾಸ ಮೂರ್ತಿ ಹಾಜರಿದ್ದರು.