Advertisement

ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಿ: ಜಿಲ್ಲಾಧಿಕಾರಿ

04:32 PM Jul 04, 2019 | Team Udayavani |

ರಾಮನಗರ: ರಾಮನಗರ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿ ರೂಪಿಸಬೇಕು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಈ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಸೂಚನೆ ನೀಡಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಸಹಯೋಗದಲ್ಲಿ ಹಾಲಿ ಕಲಿಕಾ ಕಾರ್ಯಕ್ರಮಗಳ ಪ್ರಗತಿ ಹಾಗೂ 2019-20ನೇ ಸಾಲಿನ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ವಿವಿಧ ಸಾಕ್ಷರತಾ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಯಾರೂ ಅನಕ್ಷರಸ್ಥರಾಗಿ ಉಳಿಯಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ. ಹಾಗಾಗಿ ಗ್ರಾಮ, ನಗರ ಕೊಳಚೆ ಪ್ರದೇಶಗಳಲ್ಲಿ ಸಾಕ್ಷರತಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿನ 15-50 ವರ್ಷದ ಅನಕ್ಷರಸ್ಥರನ್ನು ಗುರುತಿಸಿ ಅವರನ್ನು ಅಕ್ಷರಸ್ಥರನ್ನಾಗಿ ಮಾಡಬೇಕು. ಶಿಕ್ಷಣದ ಕುರಿತು ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಕಲಿಕಾ ಕಾರ್ಯಕ್ರಮದ ಪ್ರಗತಿ ಕುರಿತಂತೆ ವಯಸ್ಕರ ಶಿಕ್ಷಣ ಬೋಧಕರು ಸಂಬಂಧಿಸಿದ ಉಸ್ತುವಾರಿ ಅಧಿಕಾರಿಗಳನ್ನು ಒಳಗೊಂಡ ವಾಟ್ಸಾಪ್‌ ಗ್ರೂಪ್‌ ರಚಿಸಿ ನಿಗಾವಹಿಸಬೇಕು. ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲಿಸಬೇಕು, ನಿಗದಿತ ಗುರಿ ಸಾಧಿಸಬೇಕು ಎಂದು ಹೇಳಿದರು.

ಜಿಪಂ ಸಿಇಒ ಎಂ.ಪಿ.ಮುಲೈಮುಹಿಲನ್‌ ಮಾತನಾಡಿ, ಡಾ.ಡಿ.ಎಂ. ನಂಜುಂಡಪ್ಪ ವರದಿ ಪ್ರಕಾರ ರಾಜ್ಯದಲ್ಲಿನ ಹಿಂದುಳಿದ, ಅತಿ ಹಿಂದುಳಿದ ಹಾಗೂ ಅತ್ಯಂತ ಹಿಂದುಳಿದ ತಾಲೂಕುಗಳಲ್ಲಿ, ನಗರ ವ್ಯಾಪ್ತಿಯ ಕೊಳಚೆ ಪ್ರದೇಶಗಳಲ್ಲಿ, ಚುನಾಯಿತ ಗ್ರಾಮ ಪಂಚಾಯ್ತಿ ಅನಕ್ಷರಸ್ಥ ಸದಸ್ಯರಿಗೆ ಮತ್ತು ಸ್ತ್ರೀ ಶಕ್ತಿ ಗುಂಪುಗಳಲ್ಲಿನ ಅನಕ್ಷರಸ್ಥ ಸದಸ್ಯರನ್ನು ಸಾಕ್ಷರರನ್ನಾಗಿಸುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಪುರಸೃ್ಕತ ಯೋಜನೆ ಅಡಿಯಲ್ಲಿ ಸರ್ಕಾರವು ಸಾಕ್ಷರತಾ ಕಾರ್ಯಕ್ರಮ ಆಯೋಜಿಸಿದೆ ಎಂದು ವಿವರಿಸಿದರು. ವಯಸ್ಕರ ಶಿಕ್ಷಣ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next