ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪೀರನವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ನೂತನವಾಗಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದರು.
ಇದಕ್ಕೂ ಮುನ್ನ ಪೀರನವಾಡಿ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಅಬಕಾರಿ ಸಚಿವ ಎಚ್.ನಾಗೇಶ್, ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆಯಿಂದಾಗಿ ವಿಕೋಪಕ್ಕೆ ತಿರುಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿವರೆಗೂ ನಡೆದ ಸಂಧಾನ ಸಭೆ ಯಶಸ್ವಿಯಾಗಿತ್ತು.
ಡಿಜಿಪಿ ಅಮರಕುಮಾರ್ ಪಾಂಡೆ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎರಡೂ ಗುಂಪಿನ ಕಡೆಯವರು ಒಂದು ಹಂತಕ್ಕೆ ಬಂದಿದ್ದು, ವಿವಾದ ಸುಖಾಂತ್ಯ ಕಂಡಿದೆ.
ರಾಯಣ್ಣ ಪ್ರತಿಮೆಯನ್ನು ಈಗ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿಯೇ ಇರಿಸುವುದು ಹಾಗೂ ಆ ವೃತ್ತಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು ಎಂಬ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.