Advertisement

ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್‌

10:31 AM Sep 28, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಅಕ್ಟೋಬರ್‌ 7ಕ್ಕೆ ಮುಂದೂಡಿದೆ.

Advertisement

ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ, ಸಂತ್ರಸ್ತ ಯುವತಿ ಸೇರಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ನಡೆಸಿತು.

ಈ ವೇಳೆ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ಹೈಕೋರ್ಟ್‌ ಅನುಮತಿ ಇಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ನಡೆಸಿರುವ ತನಿಖೆಯ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ. ಹೀಗಾಗಿ ಹೈಕೋರ್ಟ್‌ ನ ಮುಂದಿನ ಆದೇಶಕ್ಕೆ ಒಳಪಟ್ಟು ತನಿಖಾ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಅನುಮತಿ ನೀಡಬೇಕು. ಈ ಸಂಬಂಧ ನ್ಯಾಯಾಲಯ ಹಿಂದೆ ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್‌, ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಒಂದು ವೇಳೆ ನ್ಯಾಯಾಲಯ ಎಸ್‌ಐಟಿ ರಚನೆಯನ್ನೇ ಅಸಿಂಧುಗೊಳಿಸಿದರೆ, ಎಲ್ಲವೂ ನಿರರ್ಥಕವಾಗಲಿದೆ. ಆದ್ದರಿಂದ ಎಸ್‌ಐಟಿ ರಚನೆಯ ಕಾನೂನಾತ್ಮಕ ಮತ್ತು

ಸಾಂವಿಧಾನಿಕ ಸಿಂಧುತ್ವವನ್ನು ನಿರ್ಧಾರ ಮಾಡಬೇಕಿದೆ. ಹಾಗೆಯೇ, ಎಸ್‌ಐಟಿಮುಖ್ಯಸ್ಥರು ತನಿಖೆ ವೇಳೆ ರಜೆಯಲ್ಲಿದ್ದರು. ವರದಿ ಪರಿಶೀಲಿಸಲು ನಿರಾಕರಿಸಿದ್ದಾರೆ. ಹೀಗಾಗಿ ಎಸ್‌ಐಟಿ ಮುಖ್ಯಸ್ಥರ ಗೈರಿನಲ್ಲಿ ತನಿಖೆ ಮುಂದುವರಿಯಬಹುದೇ ಎಂಬುದನ್ನೂ ಪರಿಶೀಲಿಸಬೇಕಿದೆ ಎಂದರು.

Advertisement

ಅಲ್ಲದೇ, ಎಸ್‌ಐಟಿ ರಚಿಸಲು ಗೃಹ ಸಚಿವರು ಆದೇಶಿಸಿದ್ದರು. ಗೃಹ ಸಚಿವರು ತಮಗೆ ವರದಿ ಸಲ್ಲಿಸುವಂತೆ ಆದೇಶ ಮಾಡಿರುವಾಗ ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬಹುದೇ? ಹೀಗಾಗಿ, ವಿಚಾರಣಾ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಅವಕಾಶ ನೀಡಿ ಎಂದು ಕೋರುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿದರು.

ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ವಿಚಾರಣೆಯನ್ನು ಅ.7ಕ್ಕೆ ಮುಂದೂಡಿಕೆ.

Advertisement

Udayavani is now on Telegram. Click here to join our channel and stay updated with the latest news.

Next