ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ 1, 3 ಮತ್ತು 5ನೇ ಸೆಮಿಸ್ಟರ್‌ನ ಎಲ್ಲಾ ಸ್ನಾತಕ ಮತ್ತು ಸ್ನಾತಕೋತ್ತರ ಹಾಗೂ ಮೂರನೇ ಸೆಮಿಸ್ಟರ್ ನ ಎಂಬಿಎ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈಗಾಗಲೇ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಸಂಚಿತ ಮಹಾವಿದ್ಯಾಲಯಗಳಲ್ಲಿ ಪರೀಕ್ಷೆಗಳನ್ನು ಏ. 19ರಂದು ನಿಗದಿ ಮಾಡಲಾಗಿತ್ತು. ಆದರೆ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ಮುಂದುವರಿದಿದ್ದು, ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೂ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶೀಘ್ರದಲ್ಲಿ ಮಹಾವಿದ್ಯಾಲಯಗಳ ಪ್ರಾಂಶುಪಾಲರು, ಅಧ್ಯಕ್ಷರು, ನಿರ್ದೇಶಕರು ಹಾಗೂ ಸಂಯೋಜಕರಿಗೆ ತಿಳಿಸಲಾಗುವುದು ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಮೌಲ್ಯಮಾಪನ ಕುಲಸಚಿವರಾದ ಪ್ರೊ| ಎಸ್.ಎನ್. ಹುರಕಡ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೇನಾ ಸಾಮಾನ್ಯ ಪ್ರವೇಶ ಪರೀಕ್ಷೆ ಮುಂದೂಡಿಕೆ
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಏ. 25ರಂದು ನಡೆಯಬೇಕಿದ್ದ ಸೇನಾ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸೇನಾ ನೇಮಕಾತಿ ನಿರ್ದೇಶಕ ರಾಹುಲ್ ಆರ್ಯ ತಿಳಿಸಿದ್ದಾರೆ.
ಕಳೆದ ಫೆ. 4ರಿಂದ ಫೆ. 15ರವರೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಸೇನಾ ಭರ್ತಿ ರ್ಯಾಲಿ ಆಯೋಜಿಸಲಾಗಿತ್ತು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೆಹರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏ. 25ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಬೇಕಿತ್ತು. ಆದರೆ, ಕೋವಿಡ್-19 ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂಬರುವ ಪರೀಕ್ಷೆಯ ದಿನಾಂಕ ಮತ್ತು ಸ್ಥಳವನ್ನು ತಿಳಿಸಲಾಗುವುದು ಎಂದು ರಾಹುಲ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.