ಬೆಂಗಳೂರು: ಅ*ತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ (ಅ.05) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಂದು (ಅ.05) ಎಸ್ ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರುವಂತಾಗಿದೆ.
ಎಸ್ ಐಟಿ ಅಧಿಕಾರಿಗಳು ಮುನಿರತ್ನಗೆ ವೈದ್ಯಕೀಯ ಪರೀಕ್ಷೆ ನಡೆಸಿ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ಮುನಿರತ್ನ ಅವರನ್ನು ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.
ಈ ವೇಳೆ ತಮ್ಮ ಕಕ್ಷಿದಾರರಿಗೆ ಮನೆ ಊಟ ಮಾಡಲು ಅವಕಾಶ ನೀಡುವಂತೆ ವಕೀಲರು ಮನವಿ ಮಾಡಿಕೊಂಡರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಲು ಕೋರ್ಟ್ ಸೂಚಿಸಿದ್ದು, ಅಲ್ಲಿ ಅನುಮತಿ ನೀಡದಿದ್ದರೆ, ಕೋರ್ಟ್ ನಲ್ಲಿ ಅರ್ಜಿ ಹಾಕಿ ಎಂದು ತಿಳಿಸಿದೆ.
ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ಶಾಸಕ ಮುನಿರತ್ನ ಬಂಧನಕ್ಕೊಳಗಾಗಿದ್ದರು. ಇದೀಗ ಅ*ತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲುಸೇರುವಂತಾಗಿದೆ.