ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದವು ದೇಶದ ಹೈನುಗಾರರು ಹಾಗೂ ರೈತರಿಗೆ ಮರಣ ಶಾಸನವಾಗಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಹಾಲು ಉತ್ಪಾದಕರ ಸಂಘವು ಮುಕ್ತ ವ್ಯಾಪಾರದ ವಿರುದ್ಧ ನಗರದ ಸ್ವಾಂತತ್ರ್ಯ ಉದ್ಯಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತರೆ ದೇಶಗಳಿಂದ ಆಮದು ಸುಂಕ ರದ್ದುಪಡಿಸಿ ಹಾಲು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿರುವುದು ಸರಿಯಲ್ಲ ಎಂದು ತಿಳಿಸಿದರು.
ಈ ಒಪ್ಪಂದದಿಂದ ರೈತ ಬೀದಿಗೆ ಬೀಳುತ್ತಾನೆ. ಒಟ್ಟಾರೆ ಈ ಒಪ್ಪಂದ ದೇಶದ ಹೈನುಗಾರರು ಹಾಗೂ ರೈತರ ಪಾಲಿಗೆ ಮರಣ ಶಾಸನವಾಗಲಿದೆ ಎಂದರು.
ದೇಶದಲ್ಲಿ ಆರ್ಥಿಕ ಹಿಂಜರಿತ ಉಂಟಾಗುತ್ತಿದ್ದು, ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳ ನಡುವೆ ಶುಲ್ಕ ವಿನಾಯ್ತಿ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿರುವುದು ಸರಿಯಲ್ಲ. ಈ ಶಾಸನ ಜಾರಿ ಮಾಡುವುದರಿಂದ ದೇಶದ 3 ಕೋಟಿ ರೈತರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರ ವಿರೋಧ ಪಕ್ಷಗಳ ನಿಯೋಗವನ್ನು ಕರೆದೊಯ್ದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ 5 ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕರು ಭಾಗವಸಿದ್ದರು. ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ, ಕೃಷ್ಣಮೂರ್ತಿ, ಹರೀಶ್‌ಕುಮಾರ್ ಹಾಗೂ ಬಮೂಲ್ ನಿರ್ದೇಶಕರು, ಹಾಲು ಉತ್ಪಾದಕರು ಪಾಲ್ಗೊಂಡಿದ್ದರು.