ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 4ರಿಂದ 9ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಅರಿಯಲು ಇತ್ತೀಚೆಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಜಿಲ್ಲಾ ಹಂತದಲ್ಲಿ ನಡೆಯುತ್ತಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೂಂದು ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ.
ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ(ಆರ್‌ಟಿಇ) ಪ್ರಕಾರ ಒಂದರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ. ಕೇಂದ್ರ ಸರ್ಕಾರ ಆರ್‌ಟಿಇ ಕಾಯ್ದೆಗೆ ತಿದ್ದುಪಡಿ ತಂದು, ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಿವ ವ್ಯವಸ್ಥೆಗೆ ಮುಂದಾಗಿದೆ. ಕೇಂದ್ರ ಸರ್ಕಾರದ ಈ ನಿಲುವನ್ನು ರಾಜ್ಯ ಸರ್ಕಾರ ಆರಂಭದಿಂದಲೂ ವಿರೋಧಿಸುತ್ತಲೇ ಬಂದಿದೆ.
ಆದರೆ, ಮೌಲ್ಯಾಂಕನದ ಹೆಸರಿನಲ್ಲಿ ಕಳೆದ ವರ್ಷ 4 ಮತ್ತು 6ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದೆ. ಈ ವರ್ಷ ನ.3 ಮತ್ತು 4ರಂದು ನಡೆದ ಮೌಲ್ಯಾಂಕನ ಪರೀಕ್ಷೆಗೆ 4ರಿಂದ 9ನೇ ತರಗತಿಯ ಸುಮಾರು 35 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆಯು ವಿವರಣೆ ಹಾಗೂ ಬಹು ಆಯ್ಕೆಯ ಪ್ರಶ್ನೆ ಒಳಗೊಂಡಿದ್ದು, ವಿದ್ಯಾರ್ಥಿಗಳು ಒಎಂಆರ್ ಸೀಟ್‌ನಲ್ಲಿ ಉತ್ತರ ಬರೆದಿದ್ದಾರೆ. ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳ ಒಎಂಆರ್ ಸೀಟ್ ಸ್ಕ್ಯಾನಿಂಗ್ ಪ್ರಕ್ರಿಯೆ ಜಿಲ್ಲಾ ಉಪನಿರ್ದೇಶಕರ ಸರಹದ್ದಿನಲ್ಲಿ ನಡೆಯುತ್ತಿದೆ.
ಡಿಸೆಂಬರ್ ಅಂತ್ಯದೊಳಗೆ ಫಲಿತಾಂಶವನ್ನು ನೀಡಲಾಗುತ್ತದೆ. ಮೌಲ್ಯಾಂಕನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಮಾಡಿರುವ ಸಾಧನೆಯನ್ನು ಪಾಲಕರಿಗೂ ತಿಳಿಸಲಾಗುತ್ತದೆ. ಹಾಗೆಯೇ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಇತ್ತೀಚೆಗೆ ಜಾರಿಗೆ ತಂದಿರುವ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ ವ್ಯವಸ್ಥೆ(ಎಸ್‌ಎಟಿಎಎಸ್)ಯಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಎಸ್ಸೆಸ್ಸೆಲ್ಸಿ ಬೋರ್ಡ್‌ನ ವೆಬ್‌ಸೈಟ್ ಮೂಲಕ ಸಾರ್ವಜನಿಕರು ಗಮನಿಸಬಹುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.
ಮರು ಪರೀಕ್ಷೆಗೆ ಚಿಂತನೆ: ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ, ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಮೌಲ್ಯಾಂಕನ ಪರೀಕ್ಷೆ ನಡೆಸಲಾಗಿದೆ. ನಿಗದಿತ ಅಂಕಕ್ಕಿಂತ ಕಡಿಮೆ ಅಂಕ ಪಡೆದು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಲು ಇಲಾಖೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಮೌಲ್ಯಾಂಕನ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಕೂಡ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.