ಶಿವಮೊಗ್ಗ: ಕೆಲವೇ ದಿನದಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದ್ದು, ಪಕ್ಷದ ಕಾರ್ಯಕರ್ತರು ನಮ್ಮ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಹೇಳಿದರು.
ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಆಯೋಜಿಸಿದ್ದ ಲೋಕಸಭೆ ಚುನಾವಣಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನರ ಅಭ್ಯುದಯಕ್ಕೆ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಇದನ್ನು ಮನೆ- ಮನೆಗೆ ತಲುಪಿಸುವ ಕೆಲಸ ಆಗಬೇಕು ಎಂದು ಹೇಳಿದರು.
ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಜಗತ್ತಿನ ಎಲ್ಲೆಡೆ ಭಾರತದ ಗೌರವ ಹೆಚ್ಚಿದೆ. ದೇಶದಲ್ಲಿ ಅನೇಕ ಬದಲಾವಣೆ ಆಗಿರುವುದನ್ನು ಕಾಣಬಹುದು. ಮತ್ತೂಮ್ಮೆ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಬೇಕು. ಕಾರ್ಯಕರ್ತರು ಒಗ್ಗಾಟ್ಟಾಗಿ ಚುನಾವಣಾ ತಯಾರಿ ನಡೆಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ರುದ್ರೇಗೌಡ, ಲೋಕಸಭೆ ಉಪಚುನಾವಣೆಯಲ್ಲಿ ಗಳಿಸಿದ ಮತಕ್ಕಿಂತ ಹೆಚ್ಚಿನ ಮತ ಪಡೆಯುವ ಮೂಲಕ ಗೆಲುವಿನ ಅಂತರವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರದಾದ್ಯಂತ ಪ್ರಚಾರ ಕಾರ್ಯಗಳನ್ನು ಆರಂಭಿಸಿದೆ. ಆ ಮೂಲಕ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ- ಮನೆಗೆ ತಲುಪಿಸಬೇಕು. ಕಾರ್ಯಕರ್ತರು ಸಂಘಟಿತರಾಗಬೇಕು ಎಂದು ಕರೆ ನೀಡಿದರು.
ಸಂಸದ ಬಿ.ವೈ. ರಾಘವೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಸ್ವಾಮಿರಾವ್, ಮೇಯರ್ ಲತಾ ಗಣೇಶ್, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಮತ್ತಿತರರು ಇದ್ದರು.