ಗದಗ: ಜಿಲ್ಲಾಡಳಿತದಿಂದ ಆ. 15ರಂದು ಆಚರಿಸಲಾಗುತ್ತಿರುವ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಕೋವಿಡ್ -19 ಸಂದಿಗ್ಧ ಪರಿಸ್ಥಿಯಲ್ಲೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ಕೈಗೊಳ್ಳಲು ಜಿಲ್ಲಾ ಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯೊತ್ಸವ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲೆಯಾದ್ಯಂತ ಸ್ವಾತಂತ್ರ್ಯೊತ್ಸವ ವದ ಸಂಭ್ರಮವು ಪ್ಲಾಸ್ಟಿಕ್ ಮುಕ್ತವಾಗಿರಬೇಕು. ಆಚರಣೆ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು. ಈ ವೇಳೆ ಪ್ರತಿಯೊಬ್ಬರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ಆಚರಿಸಬೇಕು ಎಂದು ಸೂಚಿಸಿದರು. ಗೌರವ ಧ್ವಜವಂದನೆಯ
ಫರೇಡ್‌ನಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೊರೊನಾ ರ್ಯಾಪಿಡ್ ಟೆಸ್ಟ್ ಮಾಡಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯೊತ್ಸವ ವದ ಸಾರ್ವಜನಿಕ ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ನಗರದಲ್ಲಿ ಸ್ವತ್ಛತೆ ಕಾಪಾಡಬೇಕು. ಪ್ರಮುಖ ಬೀದಿ, ಕಟ್ಟಡ ಹಾಗೂ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಧ್ವಜಾರೋಹಣ ಸಂದರ್ಭದಲ್ಲಿ ವ್ಯತಿರಿಕ್ತ ಘಟನೆಗಳು ಸಂಭವಿಸದಂತೆ ನಿಗಾವಹಿಸಬೇಕು.
ಸಚಿವರ ಸಂದೇಶ, ಸಾಧಕರಿಗೆ ಸನ್ಮಾನ, ಆಮಂತ್ರಣ ಪತ್ರಿಕೆ ಮುದ್ರಣ, ವೇದಿಕೆ ನಿರ್ಮಾಣ, ಬಂದೋಬಸ್ತ್, ಶಾಮಿಯಾನ ವ್ಯವಸ್ಥೆ ಹಾಗೂ ಉಪಾಹಾರ ವ್ಯವಸ್ಥೆಗಳನ್ನು ಶಿಷ್ಟಾಚಾರ ಮಾರ್ಗಸೂಚಿಗಳಂತೆ ನಿರ್ವಹಿಸಲು ಜಿಲ್ಲಾ ಧಿಕಾರಿ ಎಂ. ಸುಂದರೇಶ್ ಬಾಬು ಸೂಚಿಸಿದರು.
ಜಿ.ಪಂ. ಸಿಇಒ ಡಾ| ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಸತೀಶ್‌ಕುಮಾರ್ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು