ಮಡಿಕೇರಿ: ಮುಂದಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತನ್ನು ಎದುರಿಸಲು ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿದ್ದು, ಆ ನಿಟ್ಟಿನಲ್ಲಿ ಅಗ್ನಿಶಾಮಕ, ಗೃಹ ರಕ್ಷಕ ದಳ, ಅರಣ್ಯ ಸೇರಿದಂತೆ ವಿವಿಧ ಇಲಾಖೆಗಳು ತಮಗೆ ಬೇಕಿರುವ ಸಲಕರಣೆ ಸಂಬಂಧಿಸಿದಂತೆ ಮಾಹಿತಿಯ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.
ಮುಂಗಾರು ಅವಧಿಯಲ್ಲಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ವರ್ಷದ ಪ್ರಕೃತಿ ವಿಕೋಪದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಸಂಬಂಧ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಜಿಲ್ಲಾಧಿಕಾರಿ ನಿರ್ದೇಶ ನೀಡಿದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್ ಅವರು ಹೆಚ್ಚುವರಿಯಾಗಿ ನಾಲ್ಕು ಬೋಟ್‌ಗಳ ಅಗತ್ಯವಿದ್ದು, ಈ ಸಂಬಂಧ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ ,ಭೂ ದಾಖಲೆಗಳ ಉಪ ನಿರ್ದೇಶಕÃ ಶ್ರೀನಿವಾಸ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ, ಪೌರಾಯುಕ್ತ ರಮೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಲಿ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕಿ ಗೀತಾ, ಸಹಕಾರ ಇಲಾಖೆ ಸಹಾಯಕ ನಿಬಂಧಕ ರವಿಕುಮಾರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್, ತಾ.ಪಂ.ಇಒಗಳಾದ ಸುನಿಲ್ ಕುಮಾರ್, ಷಣ್ಮುಗಂ, ಬಿಸಿಎಂ ಇಲಾಖೆಯ ಅಧಿಕಾರಿ ಲಿಂಗರಾಜು, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಅಧಿಕಾರಿ ಪುಟ್ಟರಾಜು, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ಕುಸುಮಾ, ಐಟಿಡಿಪಿ ಇಲಾಖಾ ವ್ಯವಸ್ಥಾಪಕ ದೇವ ರಾಜು, ವಿಪತ್ತು ನಿರ್ವಹಣಾ ವಿಭಾಗದ ಅನನ್ಯಾ ವಾಸುದೇವು, ಅನಿಲ್ ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ತರಬೇತಿ
ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯ ಚಟುವಟಿಕೆಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ತಾಲ್ಲೂಕು ಮಟ್ಟದಲ್ಲಿ ಗ್ರಾ.ಪಂ.ಪಿಡಿಒ ಸೇರಿದಂತೆ ತಾಲೂಕಿನ ಎಲ್ಲಾ ಹಂತದ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈ ಬಾರಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಮುಂಚಿತವಾಗಿ ಜಿ.ಪಂ.ಸಿಇಒ, ತಹಶೀಲ್ದಾರರು ಹಾಗೂ ಗ್ರಾ.ಪಂ.ಗಳಿಗೆ ಎನ್‌ಡಿಆರ್‌ಎಫ್ ಅಡಿ ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಜಿಲ್ಲೆಯ ಶಾಲೆಗಳು ಮತ್ತು ಅಂಗನವಾಡಿಗಳು, ವಿದ್ಯಾರ್ಥಿ ನಿಲಯಗಳ ಸುಸ್ಥಿತಿ ಬಗ್ಗೆ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.